ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಮಹತ್ತರವಾದ ಘಟ್ಟವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ಮಹಾವಿದ್ಯಾಲಯ ವಿ.ಸಿ. ಫಾರಂ ವತಿಯಿಂದ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿ ಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಇಚ್ಚಾನುಸಾರ ಎನ್ಎಸ್ಎಸ್, ಎನ್ ಸಿಸಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಂತಹ ಶಿಬಿರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಶಿಕ್ಷಣದ ಜೊತೆ ನಮ್ಮನ್ನು ನಾವು ಸಮುದಾಯದಲ್ಲಿ ತೋಡಗಿಸಿಕೊಳುವುದರ ಮೂಲಕ ಸಮಾಜದ ನಿಜವಾದ ಸಮಸ್ಯೆಗಳನ್ನು ಅರಿತುಕೊಂಡು ಆ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ದೊಡ್ಡದಾಗಿರುತ್ತದೆ, ಕೃಷಿ ವಿದ್ಯಾರ್ಥಿಗಳು ತಮ್ಮ ಆರ್ಥಿಕತೆಯನ್ನು ವೃದ್ಧಿಸಿಕೊಳ್ಳುವ ಬದಲು ಸಮಾಜದ ಕುರಿತು ಯೋಚಿಸಿ ಸಮಾಜವನ್ನು ಮತ್ತು ದೇಶವನ್ನು ಅಭಿವೃದ್ಧಿ ಮಾಡುವತ್ತ ಹೆಜ್ಜೆ ಇಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಂ.ಕೃಷ್ಣ, ನಿವೃತ್ತ ಎಸಿಎಫ್ ಎ.ಎಂ. ಅಣ್ಣಯ್ಯ, ಜಿಲ್ಲಾ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಮ ಲೋಕೇಶ್, ಸದಸ್ಯ ಕೃಷ್ಣ, ಮುಖಂಡರಾದ ವೆಂಕಟೇಶ್, ಮರಿಗೌಡ, ಶಂಕರೇಗೌಡ, ಎನ್ಎಸ್ಎಸ್ ಶಿಬಿರಾಧಿಕಾರಿ ಪ್ರವೀಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.




