ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಬೇಕು ಎಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಸರ್ಕಾರವನ್ನು ಒತ್ತಾಯಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಪಿ. ಹೊಸಹಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, 2025 ನೇ ಸಾಲಿನ ನೀಟ್ ಪರೀಕ್ಷೆ ಬರೆದು ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಕೋರ್ಸ್ ಗೆ ಉಚಿತ ಸೀಟು ಪಡೆದಿರುವ ಗ್ರಾಮದ ಸಹದೇವ ಅವರ ಮಗಳು ಅಪೂರ್ವ ಅವರಿಗೆ ಎನ್. ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಲ್ಯಾಪ್‌ಟಾಪ್ ವಿತರಿಸಿ, ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.
ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ರಾಜ್ಯದ ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಹೋಗುತ್ತಿದ್ದಾರೆ. ದುಬಾರಿ ಶುಲ್ಕ ಪಾವತಿಸಿ ತರಬೇತಿ ಪಡೆಯಬೇಕಾದ ಸ್ಥಿತಿ ಇದೆ. ಆದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಇದು ಕಷ್ಟವಾಗುತ್ತಿದೆ. ಪ್ರತಿಭೆ ಇದ್ದರೂ ಪರೀಕ್ಷೆ ಎದುರಿಸಲು ಅಗತ್ಯ ತರಬೇತಿ ಪಡೆಯಲಾಗದೆ ಸಾಕಷ್ಟು ಮಂದಿ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ಪರೀಕ್ಷಾ ತರಬೇತಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಸಚ್ಚಿದಾನಂದ ಮನವಿ ಮಾಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಪೂರ್ವ, ವೈದ್ಯಕೀಯ ಶಿಕ್ಷಣ ಕೋರ್ಸ್ ಮುಗಿಸಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಗುರಿ ಇಟ್ಟುಕೊಂಡಿದ್ದೇನೆ. ಐಎಎಸ್ ಅಧಿಕಾರಿ ಆಗಬೇಕು ಎಂಬುದು ನನ್ನ ಮಹದಾಸೆ ಎಂದರು.
ಗ್ರಾ.ಪಂ. ಸದಸ್ಯರಾದ ಸಾಗರ್, ಕೃಷ್ಣಾನಂದ, ಮಾಜಿ ಅಧ್ಯಕ್ಷ ಲಕ್ಷ್ಮಣ್, ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಪೈ. ಮಹದೇವು, ಮುಖಂಡರಾದ ಚಂದ್ರಪ್ಪ, ರಾಮು, ರವಿ, ರಾಜು, ಅವಿನಾಶ್, ಶರತ್, ಮನೋಜ್, ವಕೀಲ ಯೋಗೇಶ್, ಚೇತನ್, ವಿಕಾಸ್ ಈ ಸಂದರ್ಭದಲ್ಲಿ ಹಾಜರಿದ್ದರು.




