ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡಿರುವ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರನಟಿ ರಮ್ಯಾ “ಕಾನೂನಿನ ಮುಂದೆ ಎಲ್ಲರೂ ಸಮಾನರು” ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶ ರವಾನಿಸುತ್ತಿದೆ. ನ್ಯಾಯವ್ಯವಸ್ಥೆಯಲ್ಲಿ ಎಲ್ಲರೂ ನಂಬಿಕೆ ಇರಿಸಿ, ಯಾರೂ ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ರಮ್ಯಾ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗಲಿದೆ ಎಂದು ಕೆಲ ದಿನಗಳ ಹಿಂದೆ ರಮ್ಯಾ ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. ಇದರಿಂದ ಸಿಟ್ಟಾಗಿದ್ದ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪ್ರಾಣ ಬೆದರಿಕೆ ಹಾಕಿದ್ದರು.
ಈ ಬಗ್ಗೆ ರಮ್ಯಾ ದೂರು ನೀಡಿ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಹಲವು ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿದೆ.




