ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ “ಸಖಿ ಸುರಕ್ಷಾ” ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ ಮುಟ್ಟಿನ ಕಪ್ ವಿತರಣೆ ಮಾಡುವ ಕಾರ್ಯಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ ರವರು ಚಾಲನೆ ನೀಡಿದರು.
ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 10 ಜನ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಮುಟ್ಟಿನ ಕಪ್ ಗಳನ್ನು ವಿತರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರ ಸಹಕಾರದಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅನುದಾನದಡಿ 2200 ಮುಟ್ಟಿನ ಕಪ್ ಗಳು ದೊರೆತಿದ್ದು, ತಜ್ಞ ವೈದ್ಯರ ಸಲಹೆಯಂತೆ ಪ್ರಾಥಮಿಕ ಹಂತದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮುಟ್ಟಿನ ಕಪ್ ಗಳನ್ನು ವಿತರಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ತಿಳಿಸಿದರು.
ಆಶಾ ಕಾರ್ಯಕರ್ತೆಯರು ಮುಟ್ಟಿನ ಕಪ್ ಬಳಕೆಯ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವುದರಿಂದ ಮೊದಲ ಹಂದಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾಗುತ್ತಿದ್ದು, ನಂತರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಶಾಲೆಗಳಲ್ಲಿನ ಮಹಿಳಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ನ ಮಹಿಳಾ ಸದಸ್ಯರು ಹಾಗೂ ಸಿಬ್ಬಂದಿಗಳು, ಎನ್.ಆರ್.ಎಲ್.ಎಂ. ಯೋಜನೆಯ ಕೃಷಿ ಹಾಗೂ ಪಶು ಸಖಿಯರು, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಿಬ್ಬಂದಿಗಳು, ಶಾಲೆಗಳ, ಹಾಸ್ಟೆಲ್ ವಾರ್ಡನ್ ಗಳಿಗೆ ವಿತರಿಸಲು ಉದ್ದೇಶಿಸಲಾಗಿದೆ. ನಂತರದ ದಿನಗಳಲ್ಲಿ ಪದವಿ, ಪಿಯು, ಐಟಿಐ ಕಾಲೇಜು ಹಾಗೂ ಎಸ್.ಎಸ್.ಎಲ್.ಸಿ. ಯಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ವಿತರಿಸಲಾಗುತ್ತದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ತಿಳಿಸಿದರು.
ಈ ಬಗ್ಗೆ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಿತಿಯಲ್ಲಿರುತ್ತಾರೆ. ಸಮಿತಿಯು ಮುಟ್ಟಿನ ಕಪ್ ಬಳಕೆ ಕುರಿತು ಅರಿವು ಮೂಡಿಸುವುದು, ವಿತರಣೆ ಹಾಗೂ ಬಳಕೆ ಕುರಿತು ನಿರಂತರ ಅನುಸರಣೆಗೆ ಕ್ರಮವಹಿಸಲಿದೆ.
ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಚಾಲನೆ: ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಟ್ಟಿನ ಕಪ್ ವಿತರಣೆಗೆ ಸಾಂಕೇತಿಕವಾಗಿ ಆಯಾ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಚಾಲನೆ ನೀಡಿದರು.
ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಜಿಲ್ಲೆಯ ಎಲ್ಲಾ 25 ರಿಂದ 45 ವರ್ಷ ವಯೋಮಿತಿಯ ಮಹಿಳೆಯರಿಗೆ ಸಿ.ಎಸ್.ಆರ್. ಅನುದಾನದಲ್ಲಿ ಮುಟ್ಟಿನ ಕಪ್ ಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.




