ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮಂಡ್ಯ ಜಿಲ್ಲೆಯೊಂದಕ್ಕೆ 3200 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ವಿರೋಧ ಪಕ್ಷದ ನಾಯಕರು, ಕಾರ್ಯಕರ್ತರು ಸಹ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶಕ್ಕೆ ಮಾದರಿಯಾಗಿರುವ ಈ ಯೋಜನೆಯ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು.
ಮಂಡ್ಯ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಪಂಚಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಕರ್ನಾಟಕದ ಗ್ಯಾರಂಟಿ ಯೋಜನೆಗಳು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಾದರಿ (ಮಾಡೆಲ್) ಯೋಜನೆಗಳಾಗಿವೆ ಎಂದರು.
ಎಲ್ಲಾ ವರ್ಗದವರಿಗೆ ಗ್ಯಾರಂಟಿ ಯೋಜನೆ ತಲುಪುತ್ತಿವೆ
ರಾಜ್ಯದ ತಳಸಮುದಾಯವರು ಸೇರಿದಂತೆ ಎಲ್ಲಾ ವರ್ಗದವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ತಲುಪುತ್ತಿವೆ. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಮ್ಮ ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಗಳ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮತ್ತಷ್ಟು ಪರಿಣಾಮಕಾರಿಯಾಗಿ ಆಗಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರ ಮಾರ್ಗದರ್ಶನದಲ್ಲಿ ಪಂಚಗ್ಯಾರಂಟಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಶಾಸಕರು ಹಾಗೂ ಜಿಲ್ಲಾ ಸಮಿತಿ ಸದಸ್ಯರು ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದು ನಮ್ಮ ನಡೆ ಫಲಾನುಭವಿಗಳ ಕಡೆಯತ್ತ ಸಾಗುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ 94 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ಈ ಯೋಜನೆಗಳು ದೇಶ ವಿದೇಶಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಗ್ಯಾರಂಟಿ ಯೋಜನೆಗಳಿಂದ ದೇಶದಲ್ಲೇ ಕರ್ನಾಟಕದ ತಲಾದಾಯ ನಂಬರ್ ಒನ್ ಆಗಿದೆ. ವಿರೋಧ ಪಕ್ಷದವರು ಟೀಕಿಸಿದರೂ ಸಾಮಾನ್ಯ ಜನರು ಸ್ವಾಗತಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಗ್ಯಾರಂಟಿ ಸಮಾವೇಶ ಮಾಡುವ ಮೂಲಕ ಹಳ್ಳಿಹಳ್ಳಿಗಳಲ್ಲಿ ಸರ್ಕಾರದ ಸಾಧನೆ ಮುಟ್ಟಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಪ್ರತಿ ತಿಂಗಳು 4.5- 5 ಸಾವಿರ ಹಣ ಸಿಗುತ್ತಿದೆ. ಇದರಿಂದ ಮಕ್ಕಳ ಸ್ಕೂಲ್ ಫೀಸ್, ಔಷಧಿ ಕೊಳ್ಳುವಿಕೆಗೆ ಸಹಕಾರಿಯಾಗುತ್ತಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ, ಉಪಾಧ್ಯಕ್ಷರಾದ ಪ್ರಶಾಂತ್ ಬಾಬು, ರಾಜೇಂದ್ರ, ಶಿವಣ್ಣ, ಹನುಮಂತಯ್ಯ, ಸದಸ್ಯರುಗಳು ಹಾಗೂ ಜಿಪಂನ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಬೋರ್ ವೆಲ್ ಕೊರೆಸಿದ ಫಲಾನುಭವಿ
ಗೃಹಲಕ್ಷ್ಮಿ ಹಣ ಗ್ರಾಮೀಣ ಭಾಗದ ಜನರ ಬದುಕನ್ನು ಬಂಗಾರವನ್ನಾಗಿಸಿದೆ. ಕೆ.ಆರ್.ಪೇಟೆಯಲ್ಲಿ ಫಲಾನುಭವಿಯೊಬ್ಬರು ಬೋರ್ ವೆಲ್ ಕೊರೆಸಿದ್ದರೆ, ಶ್ರೀರಂಗಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬಳಕೆ ಮಾಡಿದ್ದಾರೆ. ಕೆಲವರು ಅಂಗಡಿ ಮುಂಗಟ್ಟು ಆರಂಭಿಸಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಎಲ್ಲಾ ಪಕ್ಷದ, ಎಲ್ಲಾ ಸಮುದಾಯದವರು ಸಹ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಸಮಿತಿ ಸದಸ್ಯರು ಮಾಹಿತಿ ಹಂಚಿಕೊಂಡರು.
ಪರಿಣಾಮಕಾರಿಯಾಗಿ ಅನುಷ್ಠಾನ
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇದುವರೆಗೂ 18 ಸಭೆಗಳು ನಡೆದಿವೆ. ಯೋಜನೆಗಳ ಅನುಷ್ಠಾನ ಸಂಬಂಧ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳನ್ನು ಪರಿಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಹಳ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾಲೇಜು ಹಂತದಲ್ಲಿ ನೋಂದಣಿ ಹಮ್ಮಿಕೊಳ್ಳುವುದರ ಜೊತೆಗೆ ತರಬೇತಿ ಕೂಡ ನೀಡಲಾಗುತ್ತಿದೆ ಎಂದರು.
ಗ್ಯಾರಂಟಿ ಹಣ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸಿದವರಿಗೆ ಗೌರವ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವ ರೀತಿಯಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಅನುಷ್ಠಾನಗೊಳಿಸಿರುವುದು ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದೆ.
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮಗೆ ಬಂದ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ತೊಡಗಿಸಿಕೊಂಡಿರುವುದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಂಡುಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದವರನ್ನು ಗೌರವಿಸುವ ಕೆಲಸ ಮಾಡಲಾಗುವುದು ಎಂದು ದಿನೇಶ್ ಗೂಳಿಗೌಡ ಹೇಳಿದರು.




