Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸೆ.22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಡಾ.ಕುಮಾರ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸೆಪ್ಟೆಂಬರ್‌ 22 ರಿಂದ ಮಂಡ್ಯ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಂಡಿದ್ದು, ಈ ಸಮೀಕ್ಷೆಯು ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಮಟ್ಟವನ್ನು ತಿಳಿಯಲು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸ್ಪಷ್ಟಪಡಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ರ ಜಿಲ್ಲಾ ಹಂತದ ಮಾಸ್ಟರ್ ಟ್ರೈನರ್ಸ್ ಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗಿಯಾಗಿ ಮಾತನಾಡಿದರು.

ಈ ಸಮೀಕ್ಷೆಯನ್ನು ಯಾವುದೇ ಜಾತಿ, ಧರ್ಮ ಹಾಗೂ ಮತವನ್ನು ತಿಳಿದಿಕೊಳ್ಳಲು ನಡೆಸುತ್ತಿಲ್ಲ. ಪ್ರತಿಯೊಬ್ಬ ನಾಗರೀಕರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಮಟ್ಟದ ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದರು.

ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಸದರಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ಸ್ ಇದರ ಸದುಪಯೋಗ ಪಡೆದುಕೊಂಡು ಸಮೀಕ್ಷೆಯನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

ಸಮೀಕ್ಷೆಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಕೈಗೊಳ್ಳುವುದರಿಂದ ಯಾವುದೇ ಸಮಸ್ಯೆ ಉಂಟಾಗದಂತೆ ಗಣತಿದಾರರು ನೋಡಿಕೊಳ್ಳಬೇಕು. ಯಾವ ರೀತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಾರೋ ಅದೇ ರೀತಿಯಲ್ಲಿ ಅಚ್ಚುಕಟ್ಟಾಗಿ ಸಮೀಕ್ಷೆದಾರರಿಗೆ ತರಬೇತಿ ನೀಡಿ ಎಂದು ತಿಳಿಸಿದರು.

ಸಮೀಕ್ಷೆಗೂ ಮುನ್ನ ಸಮೀಕ್ಷೆದಾರರಿಗೆ ಹಾಗೂ ಸಾರ್ವಜನಿರಿಗೆ ಅನುಕೂಲವಾಗಲು ಸಮೀಕ್ಷೆಯಲ್ಲಿ ಕೇಳುವ ಪ್ರಶ್ನಾವಳಿಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಈಗಾಗಲೇ ಮನೆ -ಮನೆಗಳಿಗೆ ಭೇಟಿ ನೀಡಿ ತಲುಪಿಸಲಾಗುತ್ತಿದೆ. ಸಮೀಕ್ಷೆದಾರರು ಕೌಶಲ್ಯಯುತವಾಗಿ ವಿಶ್ವಾಸದಿಂದ ಸಾರ್ವಜನಿಕರಲ್ಲಿ ಮಾಹಿತಿ ಪಡೆಯಿರಿ ಎಂದು ತಿಳಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ರಾಜ್ಯ ಹಂತದ ಮಾಸ್ಟರ್ ಟ್ರೈನರ್ಸ್ ನಿಂದ ತರಬೇತಿ ಪಡೆದ ಜಿಲ್ಲಾ ಹಂತದ ಮಾಸ್ಟರ್ ಟ್ರೈನರ್ಸ್ ಗಣತಿದಾರರಿಗೆ ತರಬೇತಿಯನ್ನು ನೀಡುತ್ತಾರೆ. ಹಂತ ಹಂತವಾಗಿ ತರಬೇತಿ ನೀಡುವುದರಿಂದ ಮಾಹಿತಿ ರವಾನೆಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಯಿರುತ್ತದೆ. ಗಣತಿದಾರರು ಪ್ರತಿ ಹಂತದ ತರಬೇತಿಯಲ್ಲಿ ಯಾವುದೇ ಅನುಮಾನ, ಗೊಂದಲವಿದ್ದರೆ ಅದನ್ನು ಮಾಸ್ಟರ್ ಟ್ರೈನರ್ಸ್ ಬಳಿ ಕೇಳಿ ತಿಳಿದುಕೊಂಡು ಪರಿಣಾಮಕಾರಿಯಾಗಿ ಸಮೀಕ್ಷೆ ನಡೆಸಿ ಎಂದು ತಿಳಿಸಿದರು.

ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಪ್ರತಿ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸಮೀಕ್ಷೆಯ ಕಾರ್ಯ ಶೇಕಡಾ 100 ಕ್ಕೆ 100 ರಷ್ಟು ಯಶಸ್ವಿಯಾಗುವಂತೆ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಿ. ಯಾವುದೇ ಕಾರಣಕ್ಕೂ ಅಪ್ರಾಪ್ತರಿಂದ ಮಾಹಿತಿ ಸಂಗ್ರಹಣೆ ಮಾಡುವಂತಿಲ್ಲ, ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಟ್ರಾನ್ಸ್ ಜೇಂಡರ್ ಸಮಸ್ಯೆಗಳನ್ನ ಆಲಿಸಲು ಮತ್ತು ಪರಿಹರಿಸಲು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಟ್ರಾನ್ಸ್ ಜೇಂಡರ್ ಸಮೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಮಂಡ್ಯ ತಹಸೀಲ್ದಾರ್ ವಿಶ್ವನಾಥ್ ಹಾಗೂ ಮೂಡ ಆಯುಕ್ತರಾದ ಕೃಷ್ಣಕುಮಾರ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ