ಮಳವಳ್ಳಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಕ್ಷೇತ್ರದ ಶಾಸಕರ ನಿರ್ಲಕ್ಷ್ಯದಿಂದ ತಾಲ್ಲೂಕು ಆಡಳಿತ ವ್ಯವಸ್ಥೆ ನಿಷ್ಕ್ರಿಯವಾಗಿದೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆರೋಪಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾನತಾಡಿದ ಅವರು, ಕಳೆದ ಎರಡು ತಿಂಗಳಲ್ಲಿ 4 ಕೊಲೆ ನಡೆದಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಜತೆಗೆ ಹಲವು ಅಪರಾಧ ಪ್ರಕರಣಗಳು ತಾಲೂಕಿನಲ್ಲಿ ನಡೆದಿವೆ ಎಂದು ಹೇಳಿದರು.
ತಾಲ್ಲೂಕು ಆಡಳಿತದಿಂದ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಲಗೂರು ಹೋಬಳಿಯ ಬ್ಯಾಡರಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗೋಸ್ಕರ ಸರಬರಾಜಾಗಬೇಕಿದ್ದ ಗೋಧಿಯು ಕಾಂಗ್ರೆಸ್ ಮುಖಂಡನ ಮನೆಯೊಂದರಲ್ಲಿ ಪತ್ತೆಯಾಗಿದೆ. ಈ ಸಂಬಂಧ ಎಫ್ಐಆರ್ ಆಗಿದೆಯಾದರೂ ಕಾಂಗ್ರೆಸ್ ಮುಖಂಡನನ್ನು ಬಂಧಿಸುವುದನ್ನು ಬಿಟ್ಟು ವಸತಿ ಶಾಲೆಯ ಅಮಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಇದಕ್ಕೆ ಶಾಸಕರ ಕುಮ್ಮಕ್ಕಿದ್ದು, ತಮ್ಮ ಪಕ್ಷದ ಮುಖಂಡನನ್ನು ಬಚಾವ್ ಮಾಡಲು ಅಮಾಯಕನ ಮೇಲೆ ದೌರ್ಜನ್ಯ ಎಸೆಯಲಾಗಿದೆ ಎಂದು ಆರೋಪಿಸಿದರು.
ನಾನು ಕ್ಷೇತ್ರದ ಶಾಸಕನಾಗಿದ್ದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿದ್ದವು. ಆದರೆ ಪ್ರಸ್ತುತ ಶಾಸಕರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು, ಶಂಕುಸ್ಥಾಪನೆ ಕಲ್ಲುಗಳನ್ನು ಕಿತ್ತೆಸೆದಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಸಹ ಪತ್ರ ಬರೆದಿದ್ದರೂ ಏನೂ ಪ್ರಯೋಜನವಾಗಿಲ್ಲ. ಆರು ತಿಂಗಳು ಕಳೆದರು ಸರ್ಕಾರದಿಂದ ಮಾಡಲಾದ ಶಂಕುಸ್ಥಾಪನೆ ಫಲಕಗಳನ್ನು ಮರು ಸ್ಥಾಪಿಸಲು ಜಿಲ್ಲಾಧಿಕಾರಿಗಳು ಮುಂದಾಗಿಲ್ಲ ಎಂದು ದೂರಿದರು.
ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಕುರಿತು ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಲೋಕಾಯುಕ್ತ ತನಿಖೆಗೆ ದೂರು ನೀಡಿದ್ದಾರೆ. ನಾನೂ ಸಹ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಸರ್ಕಾರ ಇದೀಗ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜೆಡಿಎಸ್ ಎಸ್ಸಿ,ಎಸ್ಟಿ ವಿಭಾಗದ ಅಧ್ಯಕ್ಷ ಎಸ್.ಡಿ.ಜಯರಾಮ್, ಉಪಾಧ್ಯಕ್ಷ ಸಿದ್ದಾಚಾರಿ, ಮಳವಳ್ಳಿ ತಾಲೂಕು ಅಧ್ಯಕ್ಷ ಕಾಂತರಾಜು ಇದ್ದರು.




