ತಮ್ಮ ಸಂಸ್ಥೆಗಳನ್ನು ಜಗದಗಲ ಬೆಳೆಸಲು ಜನರಿಂದ ಆಯ್ಕೆಯಾದ ಸರ್ಕಾರದಿಂದಲೇ ಭೂಮಿ,ನೀರು, ತೆರಿಗೆ, ವಿದ್ಯುತ್, ಸೇರಿದಂತೆ ಅನೇಕ ಸವಲತ್ತುಗಳನ್ನು ಪಡೆಯುವ ಸಂಸ್ಥೆಗಳ ಮಾಲೀಕರು ಜನರ ಏಳಿಗೆಗಾಗಿ ನಡೆಯುತ್ತಿರುವ ಸಮೀಕ್ಷೆಯನ್ನೇ ತಿರಸ್ಕರಿಸುವುದು ಆತ್ಮಸಾಕ್ಷಿಗೆ ಬಗೆಯುವ ದ್ರೋಹ ಮಾತ್ರವಲ್ಲ ಉದ್ದಟತನದ ಪರಮಾವಧಿ ಎಂದು ಪರೋಕ್ಷವಾಗಿ ಇನ್‌ಫೋಸಿಸ್ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ವಿರುದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹರಿಹಾಯ್ದಿದ್ದಾರೆ.
ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ. ಜಾತಿ ಸಮೀಕ್ಷೆ ಗಣತಿಗೆ ಯಾವುದೇ ಮಾಹಿತಿ ನೀಡುವುದಿಲ್ಲ. ನಾವು ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ ಎಂದು ಬರೆದುಕೊಟ್ಟು ಸಹಿ ಹಾಕಿರುವ ಸುಧಾ ಮೂರ್ತಿ ಅವರ ನಿಲುವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಸರಳತೆ, ಶ್ರೀಮಂತಿಕೆಯನ್ನು ಮಾತ್ರ ಮುಚ್ಚಿಡಬಹುದೇ ಹೊರತು, ಜಾತಿಗ್ರಸ್ಥ ಮನಸ್ಥಿತಿಯನ್ನಲ್ಲ…! ಎಂದು ವ್ಯಂಗ್ಯವಾಡಿದ್ದಾರೆ.
ದೀನ ದಲಿತರ, ಹಿಂದುಳಿದವರ, ಬಡ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿಪಡಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯವೇ ಹೊರತು, ತೋರಣಿಕೆ, ಪ್ರಚಾರದ ಮೋಹದಿಂದ ಕೂಡಿದ ಸಮಾಜಸೇವೆಯಿಂದ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ.
ಸಾಮಾಜಿಕ ವ್ಯವಸ್ಥೆಯಲ್ಲಿ ಸರ್ವ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಗಳನ್ನು ಅವಲೋಕಿಸಿ, ಬಡವರ್ಗದವರ ಏಳಿಗೆಗಾಗಿ ಸರ್ಕಾರ ಸಮರ್ಪಕವಾದ ನೀತಿಗಳನ್ನು ರೂಪಿಸುವುದು ಸಾಂವಿಧಾನಿಕ ಜವಾಬ್ದಾರಿ. ಆದರೆ ಶ್ರೀಮಂತಿಕೆ, ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲಕ ಕಾರಣಗಳನ್ನು ನೀಡಿ ಸಾಮಾಜಿಕ ಸಮೀಕ್ಷೆಯಿಂದ ಹೊರಗುಳಿಯುವುದು ಅಷ್ಟೇ ಬೇಜವಾಬ್ದಾರಿ ಎಂದು ಟೀಕಿಸಿದ್ದಾರೆ.




