ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಶಾಲಾ ಕಾಲೇಜುಗಳ ಆವರಣವಷ್ಟೇ ಅಲ್ಲದೇ ಸರ್ಕಾರದ ಸ್ಥಳಗಳ ಅವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದನ್ನು ನಿಯಂತ್ರಿಸಿ ಕಳೆದ ಅ. 16 ರಂದು ನಡೆದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದ ಅನ್ವಯ ಸರ್ಕಾರದ (ಕಾನೂನು ಮತ್ತು ಸುವ್ಯವಸ್ಥೆ) ಜಂಟಿ ಕಾರ್ಯದರ್ಶಿಯು ಆದೇಶವೊಂದನ್ನು ಹೊರಡಿಸಿದ್ದು, ಸದರಿ ಆದೇಶವು ರಾಜ್ಯಾದ್ಯಂತ ಆರ್.ಎಸ್.ಎಸ್ ಸೇರಿದಂತೆ ಎಲ್ಲಾ ಖಾಸಗಿ ಸಂಘ ಸಂಸ್ಥೆಗಳಿಗೆ ಅನ್ವಯವಾಗಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರೆ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ಧಿಷ್ಟಪಡಿಸಲಾಗಿದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿದೆ ಎಂದು ಸರ್ಕಾರದ (ಕಾನೂನು ಮತ್ತು ಸುವ್ಯವಸ್ಥೆ) ಜಂಟಿ ಕಾರ್ಯದರ್ಶಿ ಅರ್ಚನ ಎಂ.ಎಸ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರು ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ /ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧೈಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು ಎಂದು ಸೂಚಿಸಲಾಗಿದೆ.







