Friday, November 20, 2026

ಪ್ರಾಯೋಗಿಕ ಆವೃತ್ತಿ

ಸಾಹಿತ್ಯ ಸಮ್ಮೇಳನದ ನಿರ್ಣಯಗಳ ಕಾರ್ಯಗತಕ್ಕೆ ಸಭೆ ನಡೆಸಿ : ದಿನೇಶ್ ಗೂಳಿಗೌಡ

ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಈ ಎಲ್ಲ ವಿಷಯಗಳನ್ನು ಅನುಮೋದಿಸಿ, ಅವುಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಸಭೆ ಕರೆದು ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ 6 ಪ್ರಮುಖ ನಿರ್ಣಯಗಳನ್ನು ತಕ್ಷಣ ಕಾರ್ಯಗತಗೊಳಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಸಭೆ ಆಯೋಜಿಸಿ ಸಂಬಂಧಪಟ್ಟ ಎಲ್ಲರನ್ನು ಆಹ್ವಾನಿಸುವಂತೆ ಅವರು ಮನವಿ ಮಾಡಿದ್ದಾರೆ.
ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಸಮ್ಮುಖದಲ್ಲಿ ಕೈಗೊಂಡಿದ್ದ ಪ್ರಮುಖ ನಿರ್ಣಯಗಳು
1. ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮ-2022 ಅನ್ನು ರಾಜ್ಯದಲ್ಲಿ ಸಮಗ್ರವಾಗಿ ಜಾರಿಗೆ ತರಲು ಒತ್ತಾಯಿಸುವುದು.
2. ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ: ಸರ್ಕಾರಿ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸಬೇಕು.
3. ಶಿಕ್ಷಕರ ಹುದ್ದೆ ಭರ್ತಿ: ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು.
4. ಸರೋಜಿನಿ ಮಹಿಷಿ ವರದಿ ಅನುಷ್ಠಾನ: ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸುವುದು. ಜೊತೆಗೆ, ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್‌ಗಳನ್ನು ಸರ್ಕಾರ ಎದುರಿಸುವುದು.
5. ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
6. ರಾಷ್ಟ್ರಕವಿ ಪ್ರಶಸ್ತಿ ಘೋಷಣೆ: ರಾಷ್ಟ್ರಕವಿ ಪ್ರಶಸ್ತಿಯನ್ನು ಘೋಷಿಸಬೇಕು.
ಈ ಪ್ರಮುಖ ನಿರ್ಣಯಗಳ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರು ಈ ವಿಷಯಗಳ ಗಂಭೀರತೆಯನ್ನು ಅರಿತು ಈ ಪ್ರಮುಖ ನಿರ್ಣಯಗಳ ಕುರಿತು ಚರ್ಚಿಸಲು ತಕ್ಷಣವೇ ಒಂದು ಸಭೆಯನ್ನು ಆಯೋಜಿಸುವುದರ ಜೊತೆಗೆ ಅವುಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಆದೇಶ ನೀಡಬೇಕೆಂದು ದಿನೇಶ್ ಗೂಳಿಗೌಡ ಕೋರಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ