Thursday, November 19, 2026

ಪ್ರಾಯೋಗಿಕ ಆವೃತ್ತಿ

ಆತ್ಮಹತ್ಯೆಗೆ ಯತ್ನಿಸಿದ ರೈತ | ಮಂಡ್ಯ ಜಿಲ್ಲಾಡಳಿತದ ವಿರುದ್ದ ಪ್ರಗತಿಪರರ ಪ್ರತಿಭಟನೆ

ತನ್ನ ಜಮೀನನ್ನು ಖಾತೆ ಮಾಡಿಕೊಡಲು ಸರ್ಕಾರಿ ಅಧಿಕಾರಿಗಳು ಸತಾಯಿಸುತ್ತಿದ್ದಾರೆಂದು ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ರೈತ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ, ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಮಂಡ್ಯ ಜಿಲ್ಲಾಡಳಿತದ ವಿರುದ್ದ ಹಲವು ಪ್ರಗತಿಪರ ಸಂಘಟನೆಗಳು ಮಂಗಳವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರಗತಿಪರ ಸಂಘಟನೆಗಳ ಮುಖಂಡರು, ರೈತನ ಆತ್ಮಹತ್ಯೆ ಯತ್ನ, ಸರ್ಕಾರ ಎಷ್ಟು ನಿಷ್ಕೀಯವಾಗಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕೂಲಿಕಾರರ ಸಂಘದ ಮುಖಂಡ ಎಂ.ಪುಟ್ಟಮಾದು ಮಾತನಾಡಿ, ರೈತನ ಕೆಲಸವನ್ನು ಮಾಡಿಕೊಡಲು ತಾಲ್ಲೂಕು ಆಡಳಿತ, ಜಿಲ್ಲಾಡಳಿತ ವಿಫಲವಾದ ಹಿನ್ನೆಲೆಯಲ್ಲಿ ರೈತ ಬೇಸತ್ತು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಇಂತಹ ಘಟನೆಯಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕಿದೆ ಎಂದು ಕಿಡಿಕಾರಿದರು.

ಮೂರು ದಿನದಲ್ಲಿ ಗಾಯಾಳು ರೈತನಿಗೆ ಜಮೀನನ್ನು ಖಾತೆ ಮಾಡಿಕೊಡಬೇಕು. ಕುಟುಂಬಕ್ಕೆ 15 ಲಕ್ಷ ರೂ. ಕನಿಷ್ಟ ಪರಿಹಾರ ಕೊಡಬೇಕು. ಬೇಜಾವಾಬ್ದಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು.
ಕೃಷಿ ಸಚಿವರು ಈ ಬಗ್ಗೆ ಗಮನಹರಿಸಬೇಕು ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.

ಕರುನಾಡು ಸೇವಕರು ಸಂಘಟನೆಯ ನಾಗಣ್ಣಗೌಡ ಮಾತನಾಡಿ ಒಬ್ಬ ಸಾಮಾನ್ಯ ರೈತ ತನ್ನ ಕೆಲಸ ಕಾರ್ಯಗಳಿಗೆ ನೇರವಾಗಿ ಅಧಿಕಾರಿಗಳನ್ನು ಭೇಟಿ ಮಾಡಲು ಆಗದ ಪರಿಸ್ಥಿತಿ ಇದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಕಿಡಿಕಾರಿದರು.

ಚಿತ್ರಕೂಟದ ಅರವಿಂದ ಪ್ರಭು ಮಾತನಾಡಿ ಆತ್ಮಹತ್ಯೆಗೆ ಯತ್ನಿಸಿರುವ ರೈತ ಗುಣಮುಖರಾಗಿ ಬರಲಿ, ರೈತನಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಜಿಲ್ಲಾಧಿಕಾರಿಗಳೇ ನೇರ ಹೊಣೆ ಹೊರಬೇಕು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸಿಪಿಐಎಂ ಕೃಷ್ಣೇಗೌಡ, ಅಲ್ ಇಂಡಿಯಾ ಲಾಯರ್ಸ್ ಯೂನಿಯನ್ ಮಂಡ್ಯ ಜಿಲ್ಲಾಧ್ಯಕ್ಷ ಬಿ.ಟಿ.ವಿಶ್ವನಾಥ್, ಹೆಚ್.ಡಿ.ಜಯರಾಂ, ವಿನಯ್ ಕುಮಾರ್, ಸತ್ಯಮೂರ್ತಿ, ಸಂತೋಷ್ ಗೌಡ ಸೇರಿದಂತೆ ಕೆ.ಆರ್.ಎಸ್ ರಾಜ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಪಕ್ಷ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ