ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ ೨೦೨೩-೨೪ ಹಾಗೂ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೯೦ರಷ್ಟು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭವನ್ನು ನ.೨೮ರ ಮಧ್ಯಾಹ್ನ ೨ ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿಯ ೪೫, ದ್ವಿತೀಯ ಪಿಯುಸಿಯ ೫೦ ವಿದ್ಯಾರ್ಥಿಗಳು ಸೇರಿ ೯೦ ಮಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಕಾಗಿನೆಲೆ ಕನಕಗುರು ಪೀಠದ ಶ್ರೀಶಿವಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದ ಕಾರ್‍ಯಕ್ರಮದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು. ವಿಧಾನ ಪರಿಷತ್ ಸದಸ್ಯ ಡಾ.ಯತೀದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಬೆನಕ ಬಿಲ್ಡರ್‍ಸ್ & ಡೆವಲಪರ್‍ಸ್‌ನ ಡಿ.ನರಹರಿ ಹಾಗೂ ರಾಜ್ಯ ಆರ್‌ಟಿಓ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ಕಾರ್‍ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ರಾಜ್ಯ ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಮಮನೋಹರ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ, ಕೆ.ಆರ್.ನಗರ ಶಾಸಕ ಡಿ.ರವಿಶಂಕರ್, ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷ, ಸಮಾಜ ಸೇವಕರು ಕಾರ್‍ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು, ಸಾಧಕರು, ಸಮಾಜ ಸೇವಕರು, ಜನಪ್ರತಿನಿಧಿಗಳಿಗೆ ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಎಸ್.ಎನ್.ರಾಜು, ಸಂಘಟನಾ ಕಾರ್‍ಯದರ್ಶಿ ಎಂ.ಲೋಕೇಶ್, ಆಂತರಿಕ ಲೆಕ್ಕಪರಿಶೋಧಕ ಎಂ.ಮಹೇಶ್ ಇತರರಿದ್ದರು.




