Tuesday, November 24, 2026

ಪ್ರಾಯೋಗಿಕ ಆವೃತ್ತಿ

‘ನಾನು ರಾಜಕೀಯಕ್ಕೆ ಬರುವ ಮೊದಲು ಕೃಷಿಕನಾಗಿದ್ದೆ’ ; ಸಿಎಂ ಸಿದ್ದರಾಮಯ್ಯ

‘ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಸಲಹೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯ ತಾಲ್ಲೂಕಿನ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು. ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಕೃಷಿ ವಿ.ವಿ. ಅವಶ್ಯಕತೆ ಇತ್ತು

ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.

ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ

ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ಎಂದರು.

ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ.ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲಾ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯ ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ

ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದರು.

ನಮ್ಮ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಮಂಡ್ಯ ಜಿಲ್ಲೆಯ 18 ಕೋಟಿ ಜನ ಮಹಿಳೆಯರು ಶಕ್ತಿ ಯೋಜನೆ ಅಡಿ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ ಕಬ್ಬಿನ ಗುಣಮಟ್ಟ ಹೆಚ್ಚಿಸಿ ಎಂದು ಹೇಳಿದರು.

ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಶಾಸಕ ರವಿಕುಮಾರ್, ಶ್ರೀರಂಗಪಟ್ಟಣ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ