ಅನ್ನ, ಅಕ್ಷರ, ಆರೋಗ್ಯ, ಆಶ್ರಯದ ಜೊತೆ ಧರ್ಮ ಮತ್ತು ಸಂಸ್ಕೃತಿ ಉಳಿಸಲು ಎಲ್ಲರೂ ಮುಂದಾಗಿ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆ ನೀಡಿದರು.
ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದ ಮಾರಮ್ಮ ದೇವಾಲಯ ಆವರಣದಲ್ಲಿ ಏರ್ಪಡಿಸಿದ್ದ ಶ್ರೀ ಚೌಡೇಶ್ವರಿ ಸೇವಾ ಟ್ರಸ್ಟ್ ಉದ್ಘಾಟನಾ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.
ಎಲ್ಲ ಧರ್ಮಗಳನ್ನು ಗೌರವಿಸಬೇಕು. ಭಾರತದ ಪಂಚಭೂತಗಳನ್ನು ಅನುಭವಿಸುವ ಎಲ್ಲರೂ ಭಾರತೀಯರೆ ಎಂದ ಅವರು, ಧರ್ಮದ ಅಫೀಮು ಇಟ್ಟುಕೊಂಡರೆ ಅದು ಮೂಲಭೂತವಾಗುತ್ತದೆ ಎಂದು ಅಭಿಪ್ರಾಯಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ. ಶಿವಾನಂದ ಅವರು, ಟ್ರಸ್ಟ್ ದೀನ ದಲಿತರ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಗ್ರಾಮಾಭಿವೃದ್ದಿ ಮಾಡಲಿ ಎಂದು ಅಶಿಸಿದರು.ಕಾರ್ಯಕ್ರಮಕ್ಕೂ ಮುನ್ನ ಸ್ವಾಮೀಜಿಯವರನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು.
ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಸತೀಶ್, ಮುಖಂಡರಾದ ಬಿ.ಟಿ.ಅಂಕಯ್ಯ, ಸ್ವಾಮಿ, ಚಂದ್ರಶೇಖರ್, ರಾಮಲಿಂಗು, ಟ್ರಸ್ಟ್ ಉಪಾಧ್ಯಕ್ಷ ರಾಮಲಿಂಗಯ್ಯ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.




