ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದ್ದು, ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ನಿಖರ ಮಾಹಿತಿ ನೀಡಬೇಕು ಎಂದು ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಸೂಚನೆ ನೀಡಿದರು.
ಮಂಡ್ಯದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಉಂಟಾದ ಮಳೆಹಾನಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರು, ಬಡ ಜನರು, ಗ್ರಾಮೀಣ ಭಾಗದ ಜನರು ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರಿಯಾದ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಒದಗಿಸದಿದ್ದರೆ, ಸರ್ಕಾರದಿಂದ ಪರಿಹಾರ ದೊರಕುವುದಿಲ್ಲ.ಇದನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ನಿಗದಿಪಡಿಸಿರುವ ಅವಧಿಯಲ್ಲಿ ಪರಿಶೀಲನೆ ನಡೆಸಿ ನಿಖರ ಮಾಹಿತಿ ಒದಗಿಸಿ ಎಂದರು.
ಮಳೆಯ ಹಿನ್ನಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಕೆರೆಗಳು ತುಂಬಿ ಕೋಡಿ ಒಡೆದಿದ್ದು, ಅವುಗಳ ತುರ್ತು ಕಾಮಗಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಅನೇಕ ಮನೆಗಳು ಸಂಪೂರ್ಣ ಹಾನಿಯಾಗಿದೆ. ಜಾನುವಾರುಗಳು, ಕೃಷಿ ಬೆಳೆ, ರಸ್ತೆಗಳು,ಸೇತುವೆ, ಶಾಲೆಗಳು, ವಿದ್ಯುತ್ ಕಂಬಗಳು, ಕೆರೆಗಳು ಹೆಚ್ಚು ಹಾನಿಯಾಗಿರುವುದು ಇವುಗಳಿಗೆ ಸೂಕ್ತ ಪರಿಹಾರ ನೀಡಲು ಕ್ರಮವಹಿಸಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಮಾತನಾಡಿ,ನಾಳೆ ಒಳಗಾಗಿ ಮಳೆಹಾನಿ ಕುರಿತಂತೆ ವರದಿಯನ್ನು ಅಧಿಕಾರಿಗಳು ನನ್ನ ಕಚೇರಿಗೆ ಸಲ್ಲಿಸಬೇಕು. ಸರ್ಕಾರಕ್ಕೆ ಪರಿಹಾರಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕಿದೆ. ಜನರು ಮಳೆ ಹಾನಿ ಪರಿಹಾರದಿಂದ ವಂಚಿತರಾದರೆ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ.ಸಿಇಓ ಶಾಂತ ಎಂ. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




