Saturday, November 21, 2026

ಪ್ರಾಯೋಗಿಕ ಆವೃತ್ತಿ

ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಿ, ಪಂಚಾಯತ್‌ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್‌ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

-ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ ಎಂದರು.

ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ ಎಂದು ದೂರಿದರು.

ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್‌ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಪಕ್ಷವು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ ಎಂದು ಕಿಡಿಕಾರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ