ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಅನುದಾನದ ಬಗ್ಗೆ ಲೇವಡಿ ಮಾಡಿದ್ದಾರೆ. ೨೦೧೮ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಜನತೆಯ ಮುಂದಿಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಜಿಲ್ಲೆಯ ಸಚಿವರು ಹಾಗೂ ಶಾಸಕರುಗಳ ಮೂಲಕ ೧೦ ಸಾವಿರ ಕೋಟಿ ರೂ ಅಭಿವೃದ್ಧಿ ಕಾರ್ಯಗಳನ್ನು ತಂದಿದ್ದಾರೆ ಎಂದರು.
ಕುಮಾರಸ್ವಾಮಿಯವರು ಜಿಲ್ಲೆಯ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾಗಿ ಪ್ರದೇಶಾಭಿವೃದ್ಧಿ ಅನುದಾನ ಹೊರತು ಪಡಿಸಿ ಇಲ್ಲಿವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ತಂದಿಲ್ಲ. ಅದನ್ನು ಬಿಟ್ಟು ಪದೇ ಪದೇ ೮ ಸಾವಿರ ಕೋಟಿ ಬಗ್ಗೆ ಮಾತನಾಡಿ ಜನತೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ದೂರಿದರು.
ಇತ್ತೀಚೆಗೆ ಕೆ.ಆರ್.ಪೇಟೆಗೆ ಆಗಮಿಸಿದ ನಿಖಿಲ್‌ಕುಮಾರಸ್ವಾಮಿ ಸಚಿವ ಚಲುವರಾಯಸ್ವಾಮಿ ಅವರನ್ನು ಮಿಸ್ಟರ್ ಎಂದು ಕರೆದಿದ್ದಾರೆ. ಹಿರಿಯನ್ನು ಗೌರವಿಸುವ ಸಂಸ್ಕೃತಿ ಇದೆಯೇ ಎಂದು ಪ್ರಶ್ನಿಸಿದರು.
ಮೈಷುಗರ್‌ಗೆ ಸಂಬಂಧಿಸಿದಂತೆ ತನಿಖಾ ತಂಡದಿಂದ ಯಾವುದೇ ಲೋಪವಾಗಿಲ್ಲ ಎಂದು ಹೇಳಿದ್ದು, ಎಲ್ಲ ವ್ಯವಹಾರಗಳು ಪಾರದರ್ಶಕವಾಗಿದೆ. ಮುಂದಿನ ಹಂಗಾಮಿಗೆ ಯಶಸ್ವಿಯಾಗಿ ಕಬ್ಬು ನುರಿಯಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ೧೦ ಸಾವಿರ ಕೋಟಿ ಅನುದಾನ ತಂದಿರುವುದರ ಸಂಬಂಧ ಒಂದು ವಾರದೊಳಗೆ ಕ್ಷೇತ್ರವಾರು ಪಟ್ಟಿ ಬಿಡುಗಡೆ ಮಾಡುವುದಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರ ನಿಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಚಿನಕುರಳಿ ರಮೇಶ್, ರಾಮಕೃಷ್ಣ, ಮಹದೇವು, ವಿಜಯ್‌ಕುಮಾರ್, ಸಿ.ಎಂ.ದ್ಯಾವಪ್ಪ ಇತರರಿದ್ದರು.




