Sunday, November 22, 2026

ಪ್ರಾಯೋಗಿಕ ಆವೃತ್ತಿ

ಶಿವಮೊಗ್ಗ| ಹಳೇ ವಿದ್ಯಾರ್ಥಿಗಳಿಂದಲೇ ಎಸೆಸ್ಸೆಲ್ಸಿ ವಿದ್ಯಾರ್ಥಿ ಕೊಲೆ

ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ.

ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸುದ್ದಿಗಾರರಿಗೆ ತಿಳಿಸಿದರು.

ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯಿಂದ ನಿನ್ನೆ ರಾತ್ರಿಯೇ ಎಸ್ಪಿ ನಿಖಿಲ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಏಳು ಅಪ್ರಾಪ್ತ ವಯಸ್ಕರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ. ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ದಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು, ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ದಿ ಹೇಳಬೇಕು. ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಶಾಂತಿ – ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ