ಮಂಡ್ಯ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ₹12.27 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಎಸ್.ಐ. ಕೊಡಿಹಳ್ಳಿ ಗೇಟ್‌ನಿಂದ ಕೆ. ಗೌಡಗೆರೆ, ಹಂಚಹಳ್ಳಿ ಕಾಲೋನಿ, ಧ್ಯಾಪಸಂದ್ರ ಮಾರ್ಗವಾಗಿ ತಂಗಳಗೆರೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಎಸ್.ಐ. ಕೊಡಿಹಳ್ಳಿ ಗ್ರಾಮದ ಸಮೀಪ ಹಳ್ಳಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ, ಈ ಭಾಗದ ಜನರ ಬಹುದಿನಗಳ ಕನಸು ಇದೀಗ ನನಸಾಗುತ್ತಿದೆ. ರಸ್ತೆ ಅಭಿವೃದ್ಧಿಯಿಂದ ಕೊಡಿಹಳ್ಳಿ, ಗೌಡಗೆರೆ, ಹಂಚಹಳ್ಳಿ, ಧ್ಯಾಪಸಂದ್ರ ಹಾಗೂ ತಂಗಳಗೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಹಾಗೂ ಸಾರ್ವಜನಿಕರು ನಿತ್ಯ ಸಂಚಾರ ಮಾಡಲು ಅನುಕೂಲವಾಗಲಿದೆ ಎಂದರು.

ಅದೇ ರೀತಿ ಎಸ್.ಐ. ಕೊಡಿಹಳ್ಳಿ ಗ್ರಾಮದ ಸಮೀಪ ಹಳ್ಳಕ್ಕೆ ತಡೆಗೋಡೆ ನಿರ್ಮಿಸುವುದರಿಂದ ಮಳೆಗಾಲದಲ್ಲಿ ನೀರಿನ ಹರಿವಿನಿಂದ ಉಂಟಾಗುತ್ತಿದ್ದ ಅಪಾಯಗಳು ಹಾಗೂ ಅನಾಹುತಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಜನರ ಸುರಕ್ಷತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸಗಳೇ ಮುಖ್ಯ ಮಾನದಂಡ
ರಾಜಕಾರಣದಲ್ಲಿ ಅಭಿವೃದ್ಧಿ ಕೆಲಸಗಳೇ ಮುಖ್ಯವಾಗಿ ಲೆಕ್ಕಕ್ಕೆ ಬರುತ್ತವೆ. ನಾನು ಗೆದ್ದ ಮೇಲೆ ಮಾಡುತ್ತೇನೆ ಎಂಬ ಭರವಸೆಗಳಿಗಿಂತ ಜನರಿಗೆ ಅಗತ್ಯವಿರುವ ಕೆಲಸಗಳನ್ನು ಎಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತೇವೆ ಎಂಬುದು ಮುಖ್ಯ. ಕ್ಷೇತ್ರದ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಬಸರಾಳು ಭಾಗದ ರೈತರ ಜಮೀನುಗಳಿಗೆ ಕಾವೇರಿ ನೀರು
ಬಸರಾಳು ಭಾಗದ ರೈತರ ಕೃಷಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಾವೇರಿ ನದಿಯಿಂದ ನೇರವಾಗಿ ನೀರು ತರುವ ಸುಮಾರು ₹1,200 ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮುಂಬರುವ ಜನವರಿ ತಿಂಗಳಲ್ಲಿ ಈ ಯೋಜನೆಯ ಕಾಮಗಾರಿಗೆ ಚಾಲನೆ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ರವಿಕುಮಾರ್ ಗೌಡ ತಿಳಿಸಿದರು.
ಈ ಯೋಜನೆ ಅನುಷ್ಠಾನಗೊಂಡರೆ ಬಸರಾಳು ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ದೊರೆಯಲಿದೆ. ಗ್ರಾಮೀಣ ಭಾಗದ ಜನರಿಗೂ ಕಾವೇರಿ ನೀರಿನ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ. ಈ ಯೋಜನೆಗೆ ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ಸಹಕಾರ ದೊರೆತಿದೆ. ಇದರಿಂದ ಈ ಭಾಗದ ರೈತರ ಕೃಷಿ ಚಟುವಟಿಕೆ ಹಾಗೂ ಜೀವನೋಪಾಯಕ್ಕೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಪ್ರತಿ ಮನೆಗೂ ಕಾವೇರಿ ಕುಡಿಯುವ ನೀರು
ಬೋರ್‌ವೆಲ್ ನೀರನ್ನು ಕುಡಿಯುವುದರಿಂದ ಕೆಲವು ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ‘ಮನೆ ಮನೆಗೆ ಗಂಗೆ’ ಯೋಜನೆಯಡಿ ಕಾವೇರಿ ನದಿ ತೀರದ ಗ್ರಾಮಗಳಿಗೂ ಪ್ರತಿ ಮನೆಗೆ ಕಾವೇರಿ ಕುಡಿಯುವ ನೀರು ತಲುಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ರೈತರ ಸಾಲಮನ್ನಾಕ್ಕೂ ಮುಖ್ಯಮಂತ್ರಿಗಳಿಗೆ ಮನವಿ
ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುತ್ತಿರುವುದರ ಜೊತೆಗೆ ರೈತರ ಹಿತದೃಷ್ಟಿಯಿಂದಲೂ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರ ಸಾಲಮನ್ನಾ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮುಂದಿನ ಆರು ತಿಂಗಳೊಳಗೆ ರೈತರಿಗೆ ಈ ವಿಚಾರದಲ್ಲಿ ಸಿಹಿ ಸುದ್ದಿ ದೊರೆಯುವ ನಿರೀಕ್ಷೆಯಿದೆ ಎಂದು ಶಾಸಕ ರವಿಕುಮಾರ್ ಗೌಡ ಹೇಳಿದರು.
ಮಂಡ್ಯದಲ್ಲಿ 100 ಹಾಸಿಗೆಗಳ ಜಯದೇವ ಉಪಕೇಂದ್ರ
ಮಂಡ್ಯ ಜಿಲ್ಲೆಗೆ ಹೃದ್ರೋಗ ಚಿಕಿತ್ಸಾ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಂಡ್ಯ ನಗರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.
ಮುಂದಿನ ಜನವರಿ ತಿಂಗಳೊಳಗೆ ಮಂಡ್ಯ ನಗರದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ಜಯದೇವ ಹೃದ್ರೋಗ ಚಿಕಿತ್ಸಾ ಉಪಕೇಂದ್ರ ಆರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಹೃದ್ರೋಗಿಗಳು ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದ್ದು, ಸ್ಥಳೀಯವಾಗಿಯೇ ಗುಣಮಟ್ಟದ ಹೃದ್ರೋಗ ಚಿಕಿತ್ಸಾ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಹೈನುಗಾರರಿಗೆ ಆರ್ಥಿಕ ಬಲ ತುಂಬಲು ಹಾಲಿನ ದರ ಏರಿಕೆ
ಗ್ರಾಮೀಣ ಭಾಗದ ಬಹುತೇಕ ಕುಟುಂಬಗಳು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ನಡೆಸುತ್ತಿವೆ. ಹೈನುಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರದಲ್ಲಿ ₹8 ಹೆಚ್ಚಳ ಮಾಡಿದ್ದು, ಅದರಲ್ಲಿ ₹7 ನೇರವಾಗಿ ರೈತರಿಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ. ಹೈನುಗಾರರ ಆದಾಯ ಹೆಚ್ಚಿಸುವ ಮೂಲಕ ಗ್ರಾಮೀಣ ಆರ್ಥಿಕತೆಗೆ ಬಲ ತುಂಬಲು ಸರ್ಕಾರ ಬದ್ಧವಾಗಿದೆ ಎಂದರು.
ಗ್ರಾಮದ ಅಭಿವೃದ್ಧಿಗೆ ₹55 ಲಕ್ಷ ಅನುದಾನ
ಎಸ್.ಐ. ಕೊಡಿಹಳ್ಳಿ ಗ್ರಾಮದ ಮತ್ತಷ್ಟು ಅಭಿವೃದ್ಧಿಗಾಗಿ ಎಸ್‌ಟಿ ಗ್ರಾಂಟ್ ಅಡಿಯಲ್ಲಿ ₹25 ಲಕ್ಷ ಹಾಗೂ ಜನರಲ್ ಗ್ರಾಂಟ್ ಅಡಿಯಲ್ಲಿ ₹30 ಲಕ್ಷ ಸೇರಿದಂತೆ ಒಟ್ಟು ₹55 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮದ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಈ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ನೀರಾವರಿ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ಸರ್ಕಾರದ ವತಿಯಿಂದ ನಿರಂತರ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಹೇಳಿದರು.




