Tuesday, November 24, 2026

ಪ್ರಾಯೋಗಿಕ ಆವೃತ್ತಿ

ಹೆದ್ದಾರಿ ಕಳಪೆ ಕಾಮಗಾರಿ ವಿರುದ್ಧ ಶಾಸಕ ರವಿಕುಮಾರ್ ಗೌಡ ಗರಂ; NHAI ಅಧಿಕಾರಿಗೆ ಕೆಡಿಪಿ ಸಭೆಯಲ್ಲಿ ತರಾಟೆ

ಮಂಡ್ಯ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಫುಟ್‌ಪಾತ್ ಕಾಮಗಾರಿ ಅಪೂರ್ಣವಾಗಿರುವುದು ಹಾಗೂ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು, ಕೆಡಿಪಿ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಶಾಸಕರು, ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಫುಟ್‌ಪಾತ್ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿಯ ಗುಣಮಟ್ಟದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಇಷ್ಟೊಂದು ದಿನ ಕಳೆದರೂ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗಾರಿ ಪೂರ್ಣಗೊಳಿಸದೆ ಹಣ ಪಾವತಿಗೆ ಅವಕಾಶವಿಲ್ಲ

ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವುದರಿಂದ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಕಾಮಗಾರಿ ಪೂರ್ಣಗೊಳಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಲು ಹೇಗೆ ಅವಕಾಶ ನೀಡುತ್ತೀರಿ? ಮೊದಲು ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿ, ಗುಣಮಟ್ಟವನ್ನು ಪರಿಶೀಲಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಖಡಕ್ ಸೂಚನೆ ನೀಡಿದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಯಾವುದೇ ರಾಜಿ ಇರಬಾರದು. ಅಧಿಕಾರಿಗಳು ಗುತ್ತಿಗೆದಾರರ ಪರವಾಗಿ ನಿಲ್ಲದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಕಾಮಗಾರಿಯಲ್ಲಿ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ ಎಂದು ತೀವ್ರವಾಗಿ ಎಚ್ಚರಿಸಿದರು.

ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಪತ್ರ ಬರೆಯುವ ಎಚ್ಚರಿಕೆ

ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ತೋರಿದರೆ ಸುಮ್ಮನೆ ಕೂರುವುದಿಲ್ಲ. ಈ ವಿಚಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರ ಗಮನಕ್ಕೆ ಪತ್ರದ ಮೂಲಕ ತಂದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯವೈಖರಿ ಕುರಿತು ದೂರು ಸಲ್ಲಿಸಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು.

ಅಲ್ಲದೆ, ಈ ಕೂಡಲೇ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಬಾಕಿ ಉಳಿದಿರುವ ಫುಟ್‌ಪಾತ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಡಿಸೆಂಬರ್ ವರೆಗೆ ಕಾಲಾವಕಾಶ ಕೇಳಿದ ಅಧಿಕಾರಿ

ಶಾಸಕರ ತೀವ್ರ ಅಸಮಾಧಾನ ಹಾಗೂ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ, ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರವಿಕುಮಾರ್ ಗೌಡ, ಡಿಸೆಂಬರ್ ವೇಳೆಗೆ ಯಾವುದೇ ಕಾರಣಕ್ಕೂ ಕಾಮಗಾರಿ ಅಪೂರ್ಣವಾಗಿರಬಾರದು. ನಿಗದಿತ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಮತ್ತೊಮ್ಮೆ ನೀಡಿದರು.

ಒಟ್ಟಾರೆ, ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿಯ ಫುಟ್‌ಪಾತ್ ಕಾಮಗಾರಿಯ ವಿಳಂಬ ಮತ್ತು ಗುಣಮಟ್ಟದ ವಿಚಾರ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದ್ದು, ಡಿಸೆಂಬರ್ ಅಂತ್ಯದ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳ್ಳುತ್ತದೆಯೇ ಎಂಬುದನ್ನು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ