ಉತ್ತಮ ಶಿಕ್ಷಣದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯಸಭೆ ಸದಸ್ಯರು ಹಾಗೂ ಸಾಹಿತಿ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.
ಕನ್ನಡ ಸೇನೆ ಕರ್ನಾಟಕ ಮಂಡ್ಯ ಜಿಲ್ಲಾ ಘಟಕದಿಂದ ನಗರದ ಗಾಂಧಿಭವನದಲ್ಲಿ ಪ್ರಸ್ತುತ ರಾಜಕೀಯದಲ್ಲಿ ಯುವಕರ ಪಾತ್ರ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ವಿಚಾರ ಮಂಡಿಸಿ ಅವರು ಮಾತನಾಡಿದರು.

ಪ್ರಸ್ತುತ ರಾಜ್ಯದಲ್ಲಿ ೨೧ ಸಾವಿರ ಸರ್ಕಾರಿ ಶಾಲೆಗಳು ಸೋರುವ ಶಾಲೆಗಳಾಗಿ ಪರಿವರ್ತನೆಯಾಗಿವೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ, ಉತ್ತಮ ಶಿಕ್ಷಣ, ಉತ್ತಮ ಆರೋಗ್ಯ ಹಾಗೂ ಸಾಮಾಜಿಕ ಸಾಮರಸ್ಯ ಸಿಕ್ಕಿದಾಗ ಮಾತ್ರ ಉತ್ತಮ ಸಮಾಜವಾಗಲು ಸಾಧ್ಯ ಎಂದರು.
ರಾಜ್ಯದಲ್ಲಿ ಅಪೌಷ್ಠಿಕತೆ ಇದೆ. ಶೇ.೩೫ ರಷ್ಟು ಹೆಣ್ಣು ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ. ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಶೇ.೩೦ ರಷ್ಟು ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ ಇದು ಆತಂಕಕಾರಿ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದರು.

ಯುವಕರು ಇವೆಲ್ಲವನ್ನು ಕೇಳುವ ಶಕ್ತಿ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನಾವು ಸ್ಪಷ್ಟವಾದ ರಾಜ್ಯದಲ್ಲಿ ಬದುಕುತ್ತಿದ್ದೇವೆ ಎಂದು ಭಾಷವಾಗುತ್ತದೆ. ಯುವಕರಾದ ನೀವೆ ಪ್ರಶ್ನೆ ಮಾಡದಿದ್ದರೆ, ಇವರನ್ನು ಕೇಳುವವರು ಯಾರು ಎಂದು ಪ್ರಶ್ನಿಸಿದರು.
ವಿಧಾನ ಪರಿಷತ್ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಇತ್ತೀಚೆಗೆ ಯುವಕರಲ್ಲಿ ಹೃದಯಾಘಾತ ಆತಂಕಕಾರಿ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ದೇಶದ ಅಭಿವೃದ್ಧಿ ಯುವ ಸಮುದಾಯದಿಂದ ಮಾತ್ರ ಸಾಧ್ಯ. ಆದರೆ, ಹಾಸನ ಜಿಲ್ಲೆಯೊಂದರಲ್ಲೇ ೧೫ಕ್ಕೂ ಹೆಚ್ಚು ಯುವಕ ಯುವತಿಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿ ಬೇಸರವಾಯಿತ್ತು. ಇದಕ್ಕೆ ಅತಿಯಾಗಿ ಮೊಬೈಲ್ ಬಳಕೆ ಮಾಡುವುದೇ ಕಾರಣ ಎಂದು ಹೇಳಲಾಗುತ್ತಿದೆ. ದೇಶದ ಭವಿಷ್ಯದ ಪ್ರಜೆಗಳು ಈ ರೀತಿ ಹೃದಯಾಘಾತಕ್ಕೀಡಾಗುತ್ತಿರುವುದು ಬೆಸರದ ಸಂಗತಿ ಎಂದರು.
ಜನಪರ ಹೋರಾಟ ಮಾಡುವ ಯುವಕರು ಸಂಖ್ಯೆ ಕಡಿಮೆಯಾಗುತ್ತಿದೆ. ಸಮಾಜದ ಹಿತದೃಷ್ಟಿಯಿಂದ ಯುವ ಸಮುದಾಯ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟಿತ ಹೋರಾಟಕ್ಕೆ ತನ್ನದೇ ಆದ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಒಗ್ಗೂಡಬೇಕು ಎಂದು ಕರೆ ನೀಡಿದರು.
ಕೆ.ಆರ್‌ಎಸ್ ಬಳಿ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡಲು ನಿರ್ಧರಿಸಿದೆ. ಇದರಿಂದ ಡ್ಯಾಂಗೆ ಅಪಾಯವಾಗುವ ಸಂಭವವಿದೆ. ಇದನ್ನು ಖಂಡಿಸಿ ಹಲವಾರು ಪ್ರಗತಿಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಅದಕ್ಕೆ ಯುವಕರು ಧ್ವನಿಯಾಗಬೇಕು. ಅಣೆಕಟ್ಟೆ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಈ ಯೋಜನೆಗಳನ್ನು ಧಿಕ್ಕರಿಸುವ ಕೆಲಸ ಮಾಡಬೇಕೆಂದು ತಿಳಿಸಿದರು.
ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎಂ.ಡಿ.ಲಕ್ಷ್ಮಿ ನಾರಾಯಣ್, ನಗರಸಭೆ ಸದಸ್ಯೆ ಸೌಭಾಗ್ಯ ಹಾಗೂ ಹಾಸ್ಯ ನಟ ಟೆನ್ನಿಸ್ ಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.




