Thursday, July 25, 2024

ಪ್ರಾಯೋಗಿಕ ಆವೃತ್ತಿ

ಮುಖ್ಯಮಂತ್ರಿ ಬದಲಾವಣೆಯಾದರೆ ಅಹಿಂದ ಹೋರಾಟದ ಎಚ್ಚರಿಕೆ

ಡಿ.ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಬಗ್ಗೆ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ.

ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಸಚಿವ, ಶಾಸಕರ ಮಾತುಗಳು, ಮುಖ್ಯಮಂತ್ರಿ ಹುದ್ದೆಯ ಕುರಿತ ಸ್ವಾಮೀಜಿಗಳ ಹೇಳಿಕೆಗಳು ರಾಜಕೀಯದಲ್ಲಿ ತಲ್ಲಣ ಸೃಷ್ಠಿಸಿವೆ. ಇದೀಗ, ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯಾದ್ಯಂತ ಬೃಹತ್ ಹೋರಾಟಗಳನ್ನು ನಡೆಸುತ್ತೇವೆಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಹುಬ್ಬಳ್ಳಿಯಲ್ಲಿ ಅಹಿಂದ ಮುಖಂಡರು ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಣಿ, “5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಬೃಹತ್ ಹೋರಾಟಗಳನ್ನು ನಡೆಸುತ್ತೇವೆ” ಎಂದಿದ್ದಾರೆ.

“ಕೆಲವು ಸ್ವಾಮೀಜಿಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸ್ವಾಮೀಜಿಗಳು ರಾಜಕೀಯ ಹೇಳಿಕೆ ನೀಡುವುದು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತವೆ. ಚಂದ್ರಶೇಖರ ಸ್ವಾಮೀಜಿ ಅವರದ್ದು ವೈಯಕ್ತಿಕ ಅಭಿಪ್ರಾಯ. ಅವರ ಅಭಿಪ್ರಾಯಕ್ಕೆ ಕಾಂಗ್ರೆಸ್‌ ಮಣೆಹಾಕಬಾರದು” ಎಂದಿದ್ದಾರೆ.

“ಮುಖ್ಯಮಂತ್ರಿ ಬದಲಾವಣೆ ಆದ್ರೆ, ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಪ್ರತಿ ಜಿಲ್ಲೆಯಲ್ಲೂ ಅಹಿಂದ ಸಂಘಟನೆ ಮಾಡಿದ್ದೇವೆ. ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ. ಅವರ ಕಾರಣಕ್ಕಾಗಿಯೇ ಕಾಂಗ್ರೆಸ್​​ಗೆ ಮತ ಹಾಕಿದ್ದಾರೆ” ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!