Saturday, May 18, 2024

ಪ್ರಾಯೋಗಿಕ ಆವೃತ್ತಿ

370 ವಿಧಿ ರದ್ದು ಎತ್ತಿಹಿಡಿದ ಸುಪ್ರೀಂ: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸೂಚನೆ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಇಂದು(ಡಿ.11) ಎತ್ತಿ ಹಿಡಿದಿದೆ.

ನಾಲ್ಕು ವರ್ಷಗಳ ಹಿಂದೆ 370ನೇ ವಿಧಿ ರದ್ದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಕೇಂದ್ರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುದೀರ್ಘ ವಿಚಾರಣೆಯ ಬಳಿಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಇಂದು ಈ ಕುರಿತು ತೀರ್ಪು ಪ್ರಕಟಿಸಿದೆ.

ಚುನಾವಣೆ ನಡೆಸಲು ಆದೇಶ

ತೀರ್ಪು ಪ್ರಕಟಿಸುವ ವೇಳೆ ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆ ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

“ಸೆಪ್ಟೆಂಬರ್ 2024 ರೊಳಗೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು. ಆದಷ್ಟು ಬೇಗ ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು” ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಲಡಾಖ್ ಕೇಂದ್ರಾಡಳಿತ ಪ್ರದೇಶ

ಈ ನಡುವೆ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಜಮ್ಮು ಕಾಶ್ಮೀರದಿಂದ ಬೇರ್ಪಡಿಸುವ ನಿರ್ಧಾರದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. “ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಬೇರ್ಪಡಿಸುವ ನಿರ್ಧಾರದ ಸಿಂಧುತ್ವವನ್ನು ನಾವು ಎತ್ತಿ ಹಿಡಿಯುತ್ತೇವೆ” ಎಂದು ಸಿಜೆಐ ಹೇಳಿದ್ದಾರೆ.

370ನೇ ವಿಧಿ ರದ್ದಾದ ನಂತರ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂದು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿತ್ತು. ಐವರು ನ್ಯಾಯಮೂರ್ತಿಗಳಾದ ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್. ಕೆ ಕೌಲ್, ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು 16 ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರದ ವಾದವನ್ನು ಆಲಿಸಿದ್ದರು. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!