ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ವತಿಯಿಂದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಮಂಡ್ಯ ನಗರದ ಗಾಂಧಿನಗರದಲ್ಲಿ ನಡೆಯಿತು.ಆಂದೋಲನಕ್ಕೆ ಡಿ.ಹೆಚ್.ಓ ಡಾ. ಧನಂಜಯ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಇಂದಿನಿಂದ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯವನ್ನು ಮಾಡಲಾಗುತ್ತಿದೆ. ಇಂದಿನಿಂದ ಆ.15ರ ವರೆಗೆ ಮನೆ ಮನೆಗೆ ತೆರಳಿ ಆಂದೋಲನದ ರೀತಿಯಲ್ಲಿ ತಪಾಸಣೆಯನ್ನು ಮಾಡಲಾಗುತ್ತಿದೆ. ಪ್ರದಾನ ಮಂತ್ರಿಗಳ ಆಶಯದಂತೆ 2025ರ ಹೊತ್ತಿಗೆ ಕ್ಷಯಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದರು.
ಕ್ಷಯರೋಗಿಗಳನ್ನು ಗುರುತಿಸಿ, ಅವರಿಗೆ ಉಚಿತ ತಪಾಸಣೆ, ಚಿಕಿತ್ಸೆ, ಹಾಗೂ ಔಷಧಿಗಳನ್ನು ನೀಡಲಾಗುತ್ತದೆ. ಕ್ಷಯರೋಗದ ಲಕ್ಷಣಗಳಿರುವವರು ಕೂಡಲೇ ತಪಾಸಣೆಯನ್ನು ಮಾಡಿಸಿಕೊಳ್ಳಲು ಮುಂದಾಗಬೇಕೆಂದು ಕರೆ ನೀಡಿದರು.
ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್.ಆಶಾಲತಾ ಮಾತನಾಡಿ, ವಾರದಲ್ಲಿ ಒಂದು ತಾಲ್ಲೂಕಿನಲ್ಲಿ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತೆರಳಿ, ಕ್ಷಯ ರೋಗಿಗಳನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡಲಾಗುತ್ತದೆ. ರೋಗ ಲಕ್ಷಣಗಳು ಕಂಡು ಬಂದವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಮಿಮ್ಸ್ ನಲ್ಲಿ ಎಕ್ಸರೇ ವ್ಯವಸ್ಥೆಯನ್ನು ಕೂಡ ರೋಗಿಗಳಿಗೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಡಾ.ಶಶಿಕಲಾ, ಡಾ.ಸಿದ್ದಲಿಂಗಪ್ಪ ಉಗರ್, ಡಾ.ಎನ್. ಜಿ.ವೇಣುಗೋಪಾಲ್ ಸೇರಿದಂತೆ, ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.




