ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಾಪಸ್‌ಗೆ ಆಗ್ರಹಿಸಿ,ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ ಹಾಗೂ ರಾಜ್ಯ ಸರ್ಕಾರದ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಪಿ.ಎಂ ನರೇಂದ್ರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಮಳವಳ್ಳಿ-ಮೈಸೂರು ರಸ್ತೆಯ ಮೂಲಕ ಅನಂತ್‌ರಾಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಮತ್ತು ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಪ್ರತಿಭಟನೆಯನ್ನುದ್ದೇಶಿ ಮಾತನಾಡಿ,ಕೇಂದ್ರಸರ್ಕಾರ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದು ಯೋಧರ ಗೌರವವನ್ನು ಕುಗ್ಗಿಸಿದೆ. ಅಗ್ನಿಪಥ್ ಯೋಜನೆಯಲ್ಲಿ ಸೇವೆ ಸಲ್ಲಿಸಿದ ನಂತರ ಸಾವಿರಾರು ಯುವಕರು ನಿರುದ್ಯೋಗಿಗಳಾಗುತ್ತಾರೆ. ಯುವಕರಿಗೆ ಮಾರಕವಾಗಿರುವ ಅಗ್ನಿಪಥ್ ಯೋಜನೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಸರ್ಕಾರದ ದುರಾಡಳಿತದ ವಿರುದ್ಧ ದ್ವನಿ ಎತ್ತಿದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಇ ಡಿ, ಐ ಟಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಚಾರಣೆ ನೆಪದಲ್ಲಿ ಅವರಿಗೆ ಕಿರುಕುಳ ನೀಡುವ ನೀಚ ರಾಜಕಾರಣವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೋಹಿತ್ ಚಕ್ರತೀರ್ಥ ಎಂಬ ಅಜ್ಞಾನಿ ಪಠ್ಯ ಪರಿಷ್ಕರಣೆಯಲ್ಲಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ರಾಷ್ಟಕವಿ ಕುವೆಂಪು, ಕನಕದಾಸರ ಅಪಮಾನ ಮಾಡಿದ್ದರೂ ಆತನನ್ನು ಬಂಧಿಸಿಲ್ಲ ಎಂದು ಕಿಡಿಕಾರಿದರು.
ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆಂದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದು, ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಿ ಇದ್ದ ಉದ್ಯೋಗಾವಕಾಶಗಳನ್ನು ಕಿತ್ತುಕೊಂಡಿದೆ ಎಂದರು.
ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಕ್ಕಿಲ್ಲ. ಆದರೇ ವ್ಯವಸಾಯಕ್ಕೆ ಬಳಸುವ ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದರು.
ಜಾತಿ-ಧರ್ಮದ ಹೆಸರಿನಲ್ಲಿ ದೇಶದಲ್ಲಿ ಕೋಮುವಾದ ಹುಟ್ಟುಹಾಕಿ, ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಸಾರ್ವಜನಿಕರು ಮುಂದಾಗಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರ್‌ರಾಜ್, ಟಿಎಪಿಸಿಎಂಎಸ್ ಅಧ್ಯಕ್ಷರಾದ ದ್ಯಾಪೇಗೌಡ, ನಿರ್ದೇಶಕ ಎಂ ಬಸವರಾಜು, ಲಿಂಗರಾಜು, ಮಾಜಿ ತಾ ಪಂ ಅಧ್ಯಕ್ಷ ವಿಶ್ವಾಸ್, ನಾಗೇಶ್, ಪುಟ್ಟಸ್ವಾಮಿ, ಮುಖಂಡರಾದ ವೇದಮೂರ್ತಿ, ಬಿ. ಮಹದೇವು, ಚೌಡಪ್ಪ, ಜಗದೀಶ್, ರೋಹಿತ್, ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.