ರಾಜ್ಯ ಸರ್ಕಾರವು ಇತ್ತೀಚೆಗೆ ರೇಷ್ಮೇ ಇಲಾಖೆ, ತೋಟಗಾರಿಕೆ ಇಲಾಖೆಯನ್ನು ಮತ್ತು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುತ್ತಿರುವುದಾಗಿ ತಿಳಿದು ಬಂದಿದ್ದು, ರೈತರು ದೇಶದ ಬೆನ್ನೆಲುಬಾಗಿದ್ದು ಸರ್ಕಾರ ಏಕಾಏಕಿ ಈ ಇಲಾಖೆಗಳನ್ನು ವಿಲೀನಗೊಳಿಸುತ್ತಿರುವುದು ರೈತರಿಗೆ ಮಾರಕಾವಾಗುವ ಸಂಭವವಿದ್ದು, ಇತಂಹ ವಿಲೀನವನ್ನು ಕೈಬಿಡಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಹೈನುಗಾರಿಕೆಯು ಪ್ರಥಮ ಸ್ಥಾನದಲ್ಲಿದ್ದರೆ, ರೇಷ್ಮೆ ಬೆಳೆಯು ದ್ವಿತೀಯ ಸ್ಥಾನದಲ್ಲಿದ್ದು, ಇದು ರೈತರ ವಾಣಿಜ್ಯ ಬೆಳೆಯಾಗಿದ್ದು ಅವರ ಆದಾಯಕ್ಕೆ ಅನುಕೂಲವಾಗಿದೆ. ಕರ್ನಾಟಕ ರಾಜ್ಯದ ರೇಷ್ಮೇಯು ದೇಶಾದ್ಯಂತ ಹೆಸರುವಾಸಿಯಾಗಿದ್ದು, ಇಂತಹ ಸಂದರ್ಭದಲ್ಲಿ ರೇಷ್ಮೇ ಇಲಾಖೆಯನ್ನು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ವಿಲೀನಗೊಳಿಸುತ್ತಿರುವ ಪ್ರಕ್ರಿಯೆ ತಕ್ಷಣವೇ ತಡೆಯುವುದು ಅವಶ್ಯಕವಾಗಿದೆ ಎಂದಿದ್ದಾರೆ.
ರಾಜ್ಯದ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯನ್ನೇ ಅವಲಂಬಿಸಿರುವ ಲಕ್ಷಾಂತರ ರೈತ ಕುಟುಂಬಗಳು ಹಾಗೂ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ವಿಲೀನದಿಂದ ಸಂಕಷ್ಟಕ್ಕೆ ಸಿಲುಕಲಿದ್ದಾರೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ಮೂರು ಇಲಾಖೆಗಳ ವಿಲೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಹಾಗೂ ರೇಷ್ಮೇ ಇಲಾಖೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕೆಂದು ಹಾಗೂ ರೇಷ್ಮೆ ಕೃಷಿ ಪದವಿ ಪಡೆದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು ಮತ್ತು ರೇಷ್ಮೆ ಬೆಳೆಯ ಅಭಿವೃಧ್ಧಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿ, ರೈತರ ಸಂಕಷ್ಟವನ್ನು ನಿವಾರಿಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.




