ತಮ್ಮ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಮೂಡಲಕೊಪ್ಪಲು ಗ್ರಾಮದ ರೈತ ಮಂಜೇಗೌಡ (55) ಆತ್ಮಹತ್ಯೆಗೆ ಯತ್ನಿಸಿದವರು.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಜಿಲ್ಲಾಧಿಕಾರಿಗಳ ಭೇಟಿಗೆ ಯತ್ನಿಸಿದ್ದ ಇವರು, ಇಂದು ಕೂಡ ಜಿಲ್ಲಾಧಿಕಾರಿ ಭೇಟಿಗೆ ಪ್ರಯತ್ನ ನಡೆಸಿದ್ದರು. ಆದರೆ ಜಿಲ್ಲಾಧಿಕಾರಿಗಳ ಭೇಟಿ ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಜಮೀನು ಉಳಿಮೆ ಮಾಡಲು ಅರಣ್ಯ ಇಲಾಖೆ ತೊಂದರೆ ನೀಡುತ್ತಿದೆ, ನನ್ನ ಜಮೀನು 8 ಕೋಟಿ ಮೌಲ್ಯ ಹೊಂದಿದೆ. ಅರಣ್ಯ ಇಲಾಖೆಯವರು ಪದೇ ಪದೇ ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ಕೆ.ಆರ್.ಪೇಟೆ ತಹಶಿಲ್ದಾರ್ ಗೆ ದೂರು ಕೊಟ್ಟಿದ್ದೆ. ಆದ್ರೆ ಅವರು ಸಮಸ್ಯೆ ಬಗೆಹರಿಸಲಿಲ್ಲ. ಜಿಲ್ಲಾಧಿಕಾರಿ ಕಚೇರಿಗೆ ಬಂದು ದೂರು ಕೊಡಲು ಮುಂದಾದೆ. ಇಲ್ಲಿಯು ಕೂಡ ಸ್ಪಂದಿಸಿಲ್ಲ. ಇದರಿಂದ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಎಂದು ರೈತ ಮಂಜೇಗೌಡ ತಿಳಿಸಿದ್ದಾರೆ.
ಈ ಘಟನೆಯಿಂದ ಶೇ.30ರಷ್ಟು ಸುಟ್ಟ ಗಾಯಗಳಾಗಿರುವ ಇವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಕೊಂಡೊಯ್ಯಲಾಗಿದೆ.




