ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ವೈಫಲ್ಯತೆ ತೋರುತ್ತಿದೆ, ಇದರಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ನಿರಂತರ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಕೇಂದ್ರ ಸಚಿವ ಸ್ಥಾನಕ್ಕೆ ಅಂಬರೀಶ್ ರಾಜೀನಾಮೆ ನೀಡಿದ್ದರು. ಆದರೆ ಈಗಿನ ಕಾಂಗ್ರೆಸ್ ಕಾವೇರಿ ವಿಷಯದಲ್ಲಿ ಸ್ವಾರ್ಥ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಮೇಕೆದಾಟು ಪಾದಯಾತ್ರೆ ನಡೆಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಎಲ್ಲಾ ನಿರೀಕ್ಷೆ ಹುಸಿಯಾಗಿದ್ದು ಇದೀಗ ರೈತರನ್ನು ಸಂಕಷ್ಟಕ್ಕೆ ದೂಡಿದ್ದು, ಬೀದಿಗೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್ ನಾಯಕರು ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಕಾವೇರಿ ಹೋರಾಟ ಬೆಂಬಲಿಸಿದ್ದು, ಬೆಂಗಳೂರು ಬಂದ್ ಗೆ ಬಿಜೆಪಿ ಪಕ್ಷ ಬೆಂಬಲ ನೀಡಿದೆ. ರೈತರಿಗೆ ನ್ಯಾಯ ಕೊಡಿಸುವವರೆಗೂ ಹೋರಾಟ ನಿಲ್ಲದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಾಜಿ ಸಚಿವ ಡಾ.ಅಶ್ವತ್ ನಾರಾಯಣ್ ಮಾತನಾಡಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿರುವಂತೆ ಸಂಕಷ್ಟದ ಸಮಯದಲ್ಲಿ ತಮಿಳುನಾಡಿನ ಜೊತೆ ಮಾತುಕತೆಗೆ ಕರ್ನಾಟಕ ಸರ್ಕಾರ ಮುಂದಾಗ ಬೇಕಾಗಿದೆ, ತಕ್ಷಣ ಮಾತುಕತೆ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿದರು.




