Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್​ ಯಡಿಯೂರಪ್ಪ, ಡಿ ವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು.

ಬಂಡಾಯ

ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದ್ದು ಕಂಡುಬಂತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.

ಸಿ ಟಿ ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ ಸುಧಾಕರ್​, ಅರವಿಂದ ಬೆಲ್ಲದ, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕರು ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮದಿಂದ ದೂರು ಉಳಿದರು.

ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡುವೆ: ವಿಜಯೇಂದ್ರ

“ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡುವುದೇ ನನ್ನ ಗುರಿ. ನಾವೆಲ್ಲರೂ ಜಾತಿ ಮನೋಭಾವ ಬಿಟ್ಟು ಬಿಜೆಪಿ ಕಾರ್ಯಕರ್ತ ಎಂದು ಮನದಲ್ಲಿ ಇಟ್ಟುಕೊಂಡರೆ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಲು ಸಾಧ್ಯ” ಎಂದು ಬಿ ವೈ ವಿಜಯೇಂದ್ರ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, “ಕೇಂದ್ರದ ನಾಯಕರ ಆಶೀರ್ವಾದದಿಂದ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ” ಎಂದರು.

“ಜೆಪಿ ನಡ್ಡಾ ನನ್ನ ಹೆಸರು ಘೋಷಣೆ ಮಾಡಿದ ಕ್ಷಣದಿಂದ ಎಲ್ಲ ನಾಯಕರ ಜೊತೆ ವೈಯಕ್ತಿಕವಾಗಿ ಮಾತನಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಗುರಿ” ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮ ಹಾಕಬೇಕಿದೆ. ರಾಜ್ಯಾಧ್ಯಕ್ಷ ಸ್ಥಾನದ ಸ್ಥಾನದ ಮಹತ್ವ ಹಾಗೂ ಗೌರವ ಏನು ಎಂದು ಗೊತ್ತಿದೆ. ಸಾಮಾನ್ಯ ಕಾರ್ಯಕರ್ತರಿಗೆ ಗೌರವ ಕೊಡುವ ಯಡಿಯೂರಪ್ಪ ನಡೆಯನ್ನು ಹತ್ತಿರದಿಂದ ನೋಡಿದ್ದೇನೆ. ಬಿಜೆಪಿ ಕಾರ್ಯಕರ್ತರು ಯಾವತ್ತೂ ತಲೆ ತಗ್ಗಿಸಲು ಅವಕಾಶ ಕೊಡಲ್ಲ” ಎಂದರು.

“ರಾಜ್ಯಾಧ್ಯಕ್ಷನಾಗಿರುವುದರಿಂದ ಯಾರೂ ಕೂಡಾ ಬೇಸರದಲ್ಲಿ ಇಲ್ಲ, ಹಿರಿಯ ಮಾರ್ಗದರ್ಶನ ಸಲಹೆ ಸೂಚನೆಯಲ್ಲಿ ಹಗಲು ರಾತ್ರಿ ಪ್ರವಾಸ ಮಾಡಿ ಜನರ ಪರವಾಗಿ ಧ್ವನಿ ಎತ್ತುವ ಮೂಲಕ ಭ್ರಷ್ಟ ಸರ್ಕಾರಕ್ಕೆ ಉತ್ತರ ಕೊಡುವ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!