Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು-ಮೈಸೂರು ಹೆದ್ದಾರಿ ಲೋಪ ಸರಿಪಡಿಸುವೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಒಳ್ಳೆಯ ಉದ್ದೇಶ ಹೊಂದಿರುವ ಉಪಯುಕ್ತ ಯೋಜನೆಯಾಗಿದ್ದು, ಇರುವ ಸಣ್ಣ ಪುಟ್ಟ ಲೋಪಗಳನ್ನು ಸರಿಪಡಿಸಲಾಗುವುದು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು‌. ಮಂಡ್ಯ ತಾಲ್ಲೂಕಿನ ವಿವಿಧ ಭಾಗಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಇಂದು ಹೆದ್ದಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಯಾವುದೇ ತೊಂದರೆ ಇಲ್ಲ. ಸರ್ವಿಸ್ ರಸ್ತೆಯಲ್ಲಿ ತೊಂದರೆ ಇದೆ.ಅದಕ್ಕೆ ಪರ್ಯಾಯ ವ್ಯವಸ್ಥೆ ಹಾಗೂ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮೈಸೂರಿನಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿಯ 118 ಕಿ.ಮೀ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ಬೆಂಗಳೂರು ನೈಸ್ ರಸ್ತೆಯಿಂದ ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯವರೆಗೆ ಎರಡು ಹಂತದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಒಂದು ಒಳ್ಳೆಯ ಯೋಜನೆಯಾಗಿದ್ದು, ಕಾಮಗಾರಿ ಮುಗಿದ ನಂತರ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ನೈಸ್ ರಸ್ತೆಯಿಂದ ಮೈಸೂರಿಗೆ ಕೇವಲ ಒಂದು ಗಂಟೆ ಹದಿನೈದು ನಿಮಿಷದಲ್ಲಿ ತಲುಪಬಹುದು. ಇದರಿಂದ ಸುಮಾರು ಒಂದು ಮುಕ್ಕಾಲು ಗಂಟೆ ಉಳಿತಾಯವಾಗಲಿದೆ ಎಂದರು.

ಹಲವು ಕಡೆ ಗ್ರಾಮಸ್ಥರು ಕೆಲವು ತೊಂದರೆಗಳ ಬಗ್ಗೆ ಪರಿಶೀಲನೆಯ ಸಂದರ್ಭದಲ್ಲಿ ತಿಳಿಸಿದ್ದಾರೆ. 4 ರಿಂದ 5 ಕಡೆ ಜನರು ಓಡಾಡಲು ಅಂಡರ್ ಪಾಸ್ ರಸ್ತೆ ಅವಶ್ಯಕತೆ ಕಂಡುಬಂದಿದೆ. ಈ ಬಗ್ಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಲು ತಿಳಿಸಲಾಗಿದೆ.ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರ ಗಮನಕ್ಕೆ ತರಲಾಗುವುದು ಎಂದರು.

ನಿಡಘಟ್ಟ ಹಾಗೂ ಮದ್ದೂರು ಬಸ್ ಸ್ಟಾಂಡ್ ರಸ್ತೆಯ ಕೆಲವು ನ್ಯೂನತೆ. ಸರ್ವಿಸ್ ರಸ್ತೆಯಲ್ಲಿ ಚರಂಡಿ ವ್ಯವಸ್ಥೆಯ ಬಗ್ಗೆ ಕಾಮಗಾರಿ ಪ್ರಾರಂಭಿಸಿ ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್, ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಉಪವಿಭಾಗಾಧಿಕಾರಿಗಳಾದ ಆರ್.ಐಶ್ವರ್ಯ , ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!