ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಮಂಡ್ಯ ಜಿಲ್ಲೆಯಲ್ಲಿ ಹೋರಾಟ ತೀವ್ರತೆ ಪಡೆದುಕೊಂಡಿದ್ದು, ಶ್ರೀರಂಗಪಟ್ಟಣದಲ್ಲಿ ರೈತರು ಬಾರುಕೋಲು ಹಿಡಿದು ಸರ್ಕಾರರ ವಿರುದ್ದ ಆಕ್ರೋಶ ಹೊರ ಹಾಕಿದರು.
ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಮೈಸೂರು – ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ರೈತರು ಬಾರು ಕೋಲು ಚಳವಳಿ ನಡೆ,ಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದರು.
ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡುವ ಮೂಲಕ ನೆರೆ ರಾಜ್ಯದ ರೈತರ ಕಾಪಾಡಲು ಮುಂದಾಗಿರುವ ರಾಜ್ಯ ಸರ್ಕಾರ ಇಲ್ಲಿನ ರೈತರ ಹಿತವನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದರೆ, ಕೆ ಆರ್ ಎಸ್ ನಿಂದ 7,000 ಕ್ಕೂ ಹೆಚ್ಚುಕ್ಯೂ ಸೆಕ್ ನೀರು ಬಿಡುತ್ತಿರುವುದು ಖಂಡನೀಯ. ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನೀರಿಲ್ಲದ ಪರಿಸ್ಥಿತಿಯಲ್ಲಿ ಜಲಾಶಯ ಬರಿದು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ತರಲಿದೆ ಎಂದು ಕಿಡಿಕಾರಿದರು.
ಹೋರಾಟದಲ್ಲಿ ರೈತ ಮುಖಂಡ ಕೆ.ಎಸ್ ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ಬಲ್ಲೆನಹಳ್ಳಿ, ಮುಖಂಡರಾದ ಮಹದೇವು, ಕೃಷ್ಣ ನೇತೃತ್ವ ವಹಿಸಿದ್ದರು.




