- ವರದಿ: ಪಟೇಲ್ ರಾಮಕೃಷ್ಣ
ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲ್ಲೂಕಿನ ಗುಡಿಗೆರೆ ಗೇಟ್ ಬಳಿ ನಡೆದಿದೆ.
ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಜೀಗುಂಡಿ ಪಟ್ಟಣದ ಅರವಿಂದ್ (27) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಬೈಕ್ ನಲ್ಲಿದ್ದ ಮತ್ತೋರ್ವ ಹೊಸೂರು ಕಾಲೋನಿಯ ಮಂಜು (26)ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಭಾರತೀನಗರದ ಮಾರ್ಗವಾಗಿ ಮಳವಳ್ಳಿಗೆ ಹೋಗುತ್ತಿದ್ದಾಗ ಗುಡಿಗೆರೆ ಗೇಟ್ ಬಳಿ ಅಪಘಾತ ಸಂಭವಿಸಿದೆ.
ತಕ್ಷಣ ಸ್ಥಳದಲ್ಲಿದ್ದ ಜನರು ಗಾಯಗೊಂಡ ಇಬ್ಬರನ್ನು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರವಿಂದ್ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮಂಜು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.