ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಸುಳ್ಳುಪತ್ರ ಸೃಷ್ಠಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿದದು, ಕೂಡಲೇ ರಾಜೀನಾಮೆಗೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಶನಿವಾರ ಮಂಡ್ಯನಗರದಲ್ಲಿ ಧರಣಿ ನಡೆಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ, ಬಿಜೆಪಿ ಪಕ್ಷ ದಲಿತ, ಕಾರ್ಮಿಕ,ಮಹಿಳೆಯರ ಮತ್ತು ಸಂವಿಧಾನ ವಿರೋಧಿಯಾಗಿದೆ ಬಿಜೆಪಿ ತೊಲಗಲಿ ಎಂದು ಆಗ್ರಹಿಸಿದರು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ, ಬೇಕೇ ಬೇಕು, ನ್ಯಾಯ ಬೇಕು, ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಮೊಳಗಿಸಿದರು.
ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಸುಳ್ಳು ದೂರು ಸಲ್ಲಿಸಿದ್ದು, ಇದೊಂದು ಸುಳ್ಳು ದೂರು ಎಂಬುದು ಈಗಾಗಲೇ ಗೊತ್ತಾಗಿದೆ. ಪ್ರಕರಣ ಕುರಿತು ಸಿಐಡಿ ತನಿಖೆ ಚುರುಕುಗೊಂಡಿದೆ, ಸದ್ಯದಲ್ಲಿಯೇ ನಕಲಿ ದೂರಿನ ವಾಸ್ತವ ಬಯಲಾಗಲಿದೆ, ಆದರೂ ಸಹ ಬಿಜೆಪಿ ಪಕ್ಷ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ ವಾಗಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಮಧು ಜಿ ಮಾದೇಗೌಡ, ಮಾಜಿ ಶಾಸಕ ಎಚ್. ಬಿ ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮುಖಂಡರಾದ ಅಪ್ಪಾಜಿ, ಕಂಬದಹಳ್ಳಿ ಪುಟ್ಟಸ್ವಾಮಿ, ಚಿಕ್ಕಬಳ್ಳಿ ಕೃಷ್ಣ, ಎಂ.ಎಸ್.ಚಿದಂಬರ್, ಮುನಾವರ್ ಖಾನ್, ಅಂಜನಾ ಶ್ರೀಕಾಂತ್, ಸಿ. ಎಂ ದ್ಯಾವಪ್ಪ, ನಗರಸಭೆ ಸದಸ್ಯರಾದ ಶ್ರೀಧರ್, ಜ್ಯೋತಿ ಇತರರಿದ್ದರು.
ಬಿಜೆಪಿ ಅಹೋರಾತ್ರಿ ಧರಣಿ
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಿನ್ನೆಯಿಂದಲೇ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದು, ಇಂದೂ ಕೂಡ ಹೋರಾಟ ಮುಂದುವರೆದಿದೆ.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು,ಸಚಿವ ಚಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ರಾಜೀನಾಮೆಗೆ ಆಗ್ರಹಿಸಿದರು.
ಉಭಯ ಪಕ್ಷಗಳ ಕಾರ್ಯಕರ್ತರು ಧ್ವನಿ ವರ್ಧಕ ಹಾಕಿಕೊಂಡು ಘೋಷಣೆ ಕೂಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಭಾರತ್ ಮಾತೆಗೆ ಜೈಕಾರ ಹಾಕುತ್ತಾ. ಮತದಾರರ ಕಿವಿಗೆ ಹೂವು ಇಟ್ಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಒಕ್ಕಲಿಗರ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ನೀಡಬೇಕಾಗಿದ್ದ ಸಹಾಯಧನ ಕಡಿತ ಮಾಡಿದ್ದು, ಪರಿಶಿಷ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದ್ದಾರೆ, ರೈತರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಕಡಿವಾಣ ಹಾಕಲಾಗಿದೆ ಎಂದು ದೂರಿದರು.
ಕೃಷಿ ಇಲಾಖೆ ಅಧಿಕಾರಿಗಳಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು,
ಮಾಜಿ ಸಚಿವ ಕೆ ಗೋಪಾಲಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್, ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಮ್ ನೇತೃತ್ವ ವಹಿಸಿದ್ದರು.
ಪೊಲೀಸ್ ಭದ್ರತೆ
ಏಕಕಾಲದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಕಾರ್ಯಕರ್ತರು ಧರಣಿ ನಡೆಸುತ್ತಿರುವುದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆಯಾಗಿ ಮಂಡ್ಯ ಎಸ್ಪಿ ಎನ್.ಯತೀಶ್ ಅವರು ಹೆಚ್ಚಿನ ಭದ್ರತೆ ನಿಯೋಜಿಸಿದ್ದಾರೆ.




