ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಬೆಂಗಳೂರಿನ ವಿಜಯನಗರದಲ್ಲಿನ ಶ್ರೀಆದಿಚುಂಚನಗಿರಿ ಮಠದ ಶಾಖೆಗೆ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಆಶಿರ್ವಾದ ಪಡೆದುಕೊಂಡರು.

ನಂತರ ಮಂಡ್ಯಗೆ ತೆರಳಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಮಂಡ್ಯ ನಗರದಲ್ಲಿನ ವಿದ್ಯಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಿದರು. ನಂತರ ಗುತ್ತಲು ಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಮಂಡ್ಯ ನಗರದಲ್ಲಿನ ಶ್ರೀ ಜನಾರ್ಧನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಕಾಳಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಶಾಸಕರಾದ ಗಣಿಗ ರವಿ, ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಜೊತೆಯಲ್ಲಿದ್ದರು.




