Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪದವಿ : ಪಟಾಕಿ ಸಿಡಿಸಿ ಶೋಷಿತ ವರ್ಗಗಳ ಸಂಭ್ರಮ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಶೋಷಿತ ವರ್ಗಗಳ ಮಹಾ ಒಕ್ಕೂಟ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಮಂಡ್ಯ ನಗರದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು.

ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಅಭಿಮಾನಿಗಳು ಹಾಗೂ  ಪದಾಧಿಕಾರಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದರು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

nudikarnataka.com

ಜಿಲ್ಲಾ ಶೋಷಿತ ವರ್ಗಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಹೆಚ್.ನಾಗರಾಜು ಮಾತನಾಡಿ. ಸಿದ್ದರಾಮಯ್ಯ 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಅವರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ. ಅವರೊಂದು ಶಕ್ತಿ. ಸರ್ವ ಜನಾಂಗದವರೂ ಪ್ರೀತಿಸುವ ನಾಯಕರು. ಈ ಹಿಂದೆ ಅವರ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬಡವರು ಹಾಗೂ ದೀನ ದಲಿತರ ಉದ್ಧಾರಕ್ಕಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದರು ಎಂದು ಸ್ಮರಿಸಿದರು.

ಈ ಚುನಾವಣೆಯಲ್ಲಿ ರಾಜ್ಯದ ಜನರು ಸಿದ್ದರಾಮಯ್ಯ ನಾಯಕತ್ವವನ್ನು ಮೆಚ್ಚಿ 135 ಸ್ಥಾನಗಳನ್ನು ನೀಡುವ ಮೂಲಕ ಅವರೇ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು. ಜನರ ಆಶಯದಂತೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಅಹಿಂದ ವರ್ಗಕ್ಕೆ ನ್ಯಾಯ ಕಲ್ಪಿಸಿದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು  ಆಯ್ಕೆಯಾಗಲು ಕಾರಣಕರ್ತರಾದ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾಗಾಂಧಿ, ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸೇರಿದಂತೆ ಮತ್ತಿತರ ಕಾಂಗ್ರೇಸ್ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಎನ್.ದೊಡ್ಡಯ್ಯ, ಶ್ರೀನಿವಾಸ್, ಎಲ್.ಸಂದೇಶ್, ಬಿ.ಲಿಂಗಯ್ಯ, ರಾಜಣ್ಣ, ವಿಜಯಲಕ್ಷ್ಮಿ ರಘುನಂದನ್,  ಸಾತನೂರು ರಾಜು, ನಗರಸಭೆ ಮಾಜಿ ಸದಸ್ಯ ಮಹೇಶ್, ಸಾತನೂರು ಮಹೇಶ್, ವಿವೇಕ್, ಮಂಗಲ ಕೃಷ್ಣ, ಅಮ್ಜದ್‌ಪಾಷಾ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!