ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಖ್ ತನ್ವೀರ್ ಆಸೀಫ್ ಅವರು ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ತೆಂಡೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಂಡೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ದಿಡೀರ್ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಮಕ್ಕಳ ಕಲಿಕೆ ಪ್ರಗತಿದಾಯಕವಾಗಿಸಲು ಶಿಕ್ಷಕರು ಶ್ರಮಿಸುವಂತೆ ತಿಳಿಸಿದರು.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ. ಮಂಜು ಅವರೊಡನೆ ತೆಂಡೇಕೆರೆ ಗ್ರಾಮದ ಸಿ.ರಾಮಸ್ವಾಮಿ ಬಿನ್ ಚಿನ್ನ ಬೋವಿರವರ ಇ-ಸ್ವತ್ತಿನ ಕುರಿತು ಸ್ಥಳ ಮಹಜರು ಮಾಡಿ ತುರ್ತಾಗಿ ವರದಿ ನೀಡುವಂತೆ ತೆಂಡೆಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ನಂತರ ತೆಂಡೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ.ಕೆ, ತಹಶೀಲ್ದಾರ್ ಡಾ.ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರು(ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ವಿಭಾಗ)ಮಂಜುಳ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಿಮ್ಮೇಗೌಡ, ರಶ್ಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರು(ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ) ಸರ್ವೇಯರ್ ಹಾಗೂ ಗ್ರಾ.ಪಂ.ಯ ಚುನಾಯಿತ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.
ಚಿನಕುರಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಭೇಟಿ
ಪಾಂಡವಪುರ ತಾಲ್ಲೂಕು ಚಿನಕುರಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಶ್ರೀರಂಗಪಟ್ಟಣ ತಾಲೂಕು ಬಾಬುರಾಯನ ಕೊಪ್ಪಲು ಗ್ರಾಮದ ಪ್ರೌಢಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದರು.
ಎಸ್ ಎಸ್ ಎಲ್ ಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು ಹಾಗಾಗಿ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಂಡು ಹೆಚ್ಚಿನ ಅಧ್ಯಯನ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಕ್ಕಳು ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಈ ವೇಳೆಯನ್ನು ಪೂರ್ಣವಾಗಿ ವ್ಯಾಸಂಗಕ್ಕಾಗಿ ಮೀಸಲಿಸಡಬೇಕು. ತಾವು ಶ್ರದ್ಧೆಯಿಂದ ವ್ಯಾಸಂಗದಲ್ಲಿ ತೊಡಗಿಸಿಕೊಂಡಲ್ಲಿ ಭವಿಷ್ಯವು ಉಜ್ವಲವಾಗುತ್ತದೆ. ಪೂರ್ಣ ಪಾಠಗಳನ್ನು ಚೆನ್ನಾಗಿ ಅಧ್ಯಯನ ಮಾಡಿ ಎಂದು ತಿಳಿಸಿದರು.
ಪ್ರತಿಯೊಂದು ಮಗುವು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವಂತೆ ಜವಾಬ್ದಾರಿಯಿಂದ ಆಸಕ್ತಿಯಿಂದ ಪಾಠ ಮಾಡುವಂತೆ ಶಿಕ್ಷಕರಿಗೆ ನಿರ್ದೇಶನ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿಎ ಪ್ರಶಾಂತ ಬಾಬು ರವರನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಂದು ಮಗುವು ಕಡ್ಡಾಯವಾಗಿ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಪಡೆಯುವಂತೆ ಪ್ರೋತ್ಸಾಹಿಸುವುದು ಹಾಗೂ ಅಗತ್ಯ ನೆರವನ್ನು ನೀಡುವುದು ತಮ್ಮ ಕರ್ತವ್ಯವಾಗಿದೆ ಹಾಗಾಗಿ ಈ ಕುರಿತು ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು.




