ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು
ಮಂಡ್ಯ ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು, ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ರೈತಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂಕೋರ್ಟ್ ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ದೂರಿದರು.
ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್, ಸಿದ್ದರಾಮಯ್ಯ, ಸಚ್ಚಿದಾನಂದ, ಡಾ.ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ನೇತೃತ್ವ ವಹಿಸಿದ್ದರು.




