Thursday, September 19, 2024

ಪ್ರಾಯೋಗಿಕ ಆವೃತ್ತಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆ ಸೂಲಿಬೆಲೆ ಇರುವ ಪೋಟೋ ವೈರಲ್ ; ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ?

ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಜೊತೆಗೆ ಚಕ್ರವರ್ತಿ ಸೂಲಿಬೆಲೆ ಇರುವ ಫೋಟೋ ವೈರಲ್ ಆಗಿದೆ. ಇದೀಗ ಈ ಪ್ರಕರಣದಲ್ಲಿ ಇನ್ನಷ್ಟು ಜನ‌ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಮುಖ ಆರೋಪಿ (A 3) ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.‌ ಈ ನಡುವೆ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿವೆ.

ಚಕ್ರವರ್ತಿ ಸೂಲಿಬೆಲೆ ಮತ್ತು ಹಾಲಶ್ರೀ ಸ್ವಾಮೀಜಿ ರೈಲಿನಲ್ಲಿ ಪ್ರಯಾಣಿಸುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊಗಳು ಹರಿದಾಡುತ್ತಿವೆ. ಅಲ್ಲದೇ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಜೊತೆಗಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ ಅವರ ಫೋಟೊಗಳು ಕೂಡ ಹರಿದಾಡುತ್ತಿದ್ದು, ”ʼಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ”ʼ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಫೋಟೊ ಹಂಚಿಕೊಂಡಿದ್ದು, ಈ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಇರಬಹುದು ಎಂದು ಬರೆದುಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ”ಸ್ವಾಮೀಜಿ ಬಂಧನವಾಗಲಿ, ಸತ್ಯ ಹೊರ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ” ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾಳೆ.

ಚೈತ್ರಾ ಕುಂದಾಪುರ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಆರೋಪಿಗಳ ಜೊತೆಗಿರುವ ಬಿಜೆಪಿ ಮತ್ತು ಸಂಘಪರಿವಾರದ ನಾಯಕರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!