ವರದಿ : ಪ್ರಭು ವಿ.ಎಸ್
ರಾಷ್ಟ್ರೀಯ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ದ್ವೇಷದ ರಾಜಕೀಯಕ್ಕೆ ಉತ್ತಮ ಉದಾಹರಣೆಯಾಗಿದ್ದು, ರಾಜ್ಯದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ವಿರೋಧ ಪಕ್ಷದವರ ಶಕ್ತಿ ಕುಂದಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಆರೋಪಿಸಿದರು.
ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಣಸಾಲೆ ಗ್ರಾಮದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿಗೆ ತಡೆಯಾಜ್ಞೆ ಸಿಕ್ಕಿದ್ದು ಮುಂದಿನ ಆದೇಶ ಬರುವ ಮೊದಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ಧು ಪಡಿಸುವ ಔಚಿತ್ಯವೇನೆಂದು ಪ್ರಶ್ನಿಸಿದರಲ್ಲದೇ, ನೆಹರು ಕುಟುಂಬದ ನಾಯಕನನ್ನು ಏಕಾಏಕಿ ವಜಾಗೊಳಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಡನೆ ಅಧಿಕಾರ ಹಿಡಿಯಲಿದ್ದು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಒಪ್ಪಿ ಪಕ್ಷಕ್ಕೆ ಬರುವವರನ್ನು
ಸ್ವಾಗತಿಸುತ್ತೇವೆ, ಮಾ.27ರಂದು ಹಿರಿಯ ಮುಖಂಡ ಕೆಆರ್ಪೇಟೆಯ ಟಿಎಪಿಸಿಎಂಎಸ್ ಅಧ್ಯಕ್ಷ ದೇವರಾಜು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆಂದರು.
ಈಗಾಗಲೇ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಉಳಿದ ವಿಧಾನಸಭಾವಾರು ಕ್ಷೇತ್ರದ
ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.30ರ ಗುರುವಾರದೊಳಗೆ ಪ್ರಕಟವಾಗುವ ವಿಶ್ವಾಸ ವ್ಯಕ್ತಪಡಿಸಿದ ಅವರು ಕೆಆರ್ ಪೇಟೆ ಮದ್ದೂರು ಹಾಗೂ ಮಂಡ್ಯ ಕ್ಷೇತ್ರಗಳ ಉಮೇದುವಾರರ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಕಟಿಸುವ ಅಥವಾ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲಿಸುವ ಕುರಿತಾಗಿ ವರಿಷ್ಠರು ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ
ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೋಷ್ಠಿಯಲ್ಲಿ ಮನ್ಮುಲ್ ಮಾಜಿ ನಿರ್ದೇಶಕ ಕುಮಾರಕೊಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್,
ಮುಖಂಡರಾದ ಸಿದ್ದು, ಕ್ರಾಂತಿಸಿಂಹ ಇತರರಿದ್ದರು.




