ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರೆ, ಮುಂದಿನ 20 ವರ್ಷಗಳ ಕಾಲ ಕಾಂಗ್ರೆಸ್ ಬಲವರ್ಧನೆ ಆಗುತ್ತದೆ. ಆ ಮೂಲಕ ಹಲವು ಕಾರ್ಯಕರ್ತರಿಗೆ ರಾಜಕೀಯ ಸ್ಥಾನಮಾನ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು, ನಗರ ವ್ಯಾಪ್ತಿಯಲ್ಲಿ 25 ಸಾವಿರ ಬಹುಮತ ಕೊಡಿಸಲು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.
ಮಂಡ್ಯ ನಗರದ ಸುಮರವಿ ಸಮುದಾಯ ಭವನದಲ್ಲಿ ಆಯೋಜನೆಗೊಂಡಿದ್ದ ಮಂಡ್ಯ ನಗರಸಭೆ ವ್ಯಾಪ್ತಿಯ ಪಕ್ಷದ ಮುಖಂಡರು, ನಗರಸಭಾ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿ.ಪಂ ಹಾಗೂ ತಾ.ಪಂ ಚುನಾವಣೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾರಮ್ಯ ಸಾಧಿಸಲಿದೆ ಎಂಬುದನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅರ್ಥೈಸಿಕೊಂಡು ಸ್ಟಾರ್ ಚಂದ್ರು ಗೆಲುವಿಗೆ ಶ್ರಮಿಸಬೇಕೆಂದರು.

ಸ್ಥಳೀಯ ಸಂಸ್ಥೆಗಳಿಗೆ ಲೋಕಸಭೆ ಚುನಾವಣೆ ಬುನಾದಿ
ಮುಂದಿನ ನಗರಸಭೆ ಚುನಾವಣೆಗೆ ಬುನಾದಿಯಾಗಲಿರುವ ಲೋಕಸಭಾ ಚುನಾವಣೆಯನ್ನೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು. ಆ ಮೂಲಕ ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿ ಜಯಗಳಿಸಲು ಲೋಕಸಭಾ ಚುನಾವಣೆಯ ಗೆಲುವು ಅನಿವಾರ್ಯವಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.
ಮಂಡ್ಯನಗರದ ಯುಜಿಡಿ ಅನುಷ್ಟಾನಕ್ಕೆ 200 ಕೋಟಿ ಅನುದಾನ, ನಗರ ವ್ಯಾಪ್ತಿಯ ರಸ್ತೆ ಅಭಿವೃದ್ದಿಗೆ 50 ಕೋಟಿ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. 33 ಕೋಟಿ ರೂ. ವೆಚ್ಚದಲ್ಲಿ ಎಂ.ಸಿ ರಸ್ತೆ, ಪಾದಾಚಾರಿ ಮಾರ್ಗ ಹಾಗೂ ವೃತ್ತಗಳ ಅಭಿವೃದ್ದಿಗೆ ಯೋಜನೆ ಕಾರ್ಯಗತಗೊಳ್ಳಲಿದೆ ಎಂದರು.
ಸಚಿವರ ಅಪೇಕ್ಷೆಯಂತೆ ಮಂಡ್ಯನಗರ ವ್ಯಾಪ್ತಿಯಲ್ಲಿ 25 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 15 ಸಾವಿರ ಬಹುಮತ ಗಳಿಸಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ನಮ್ಮ ಪಕ್ಷದ ಕೆಲವೇ ಮುಖಂಡರು, ಕಾರ್ಯಕರ್ತರು, ಚುನಾವಣೆ ಬಗ್ಗೆ ತಾತ್ಸಾರ ತೋರುತ್ತಿರುವುದು ಸರಿಯಲ್ಲ, ಜಿಲ್ಲೆಯ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷ ಎಂದಿಗೂ ಲೋಕಸಭಾ ಚುನಾವಣೆಯನ್ನು ಇಷ್ಟೊಂದು ಗಂಭೀರವಾಗಿ ಪರಿಗಣಿಸಿರಲಿಲ್ಲ, ವ್ಯವಸ್ಥಿತ ಕಾರ್ಯವೈಖರಿಯಿಂದ ಗೆಲುವಿಗೆ ಶ್ರಮಿಸಬೇಕೆಂದರು.
ಹಿಂದುಳಿತ, ದಲಿತ, ಅಲ್ಪಸಂಖ್ಯಾತ ಮತದಾರರು ಸ್ವಯಂ ಪ್ರೇರಿತರಾಗಿ ಪಕ್ಷದ ಅಭ್ಯರ್ಥಿಗೆ ಮತ ನೀಡಲು ಮುಂದಾಗಿದ್ದಾರೆ. ಒಕ್ಕಲಿಗರು ಸಹ ತುಂಬು ಅಸ್ಥೆ ವಹಿಸಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಜಿಲ್ಲೆಯ ಅಭಿವೃದ್ದಿಯನ್ನು ಮುಂದೆ ಮಾಡಿ ಮತಯಾಚಿಸಬೇಕೆಂದು ಸಲಹೆ ನೀಡಿದರು.
ಹೆಚ್.ಡಿ.ದೇವೆಗೌಡರು ಮುಖ್ಯಮಂತ್ರಿ ಪ್ರಧಾನ ಮಂತ್ರಿಯಾಗಿದ್ದರು. ಕುಮಾರಸ್ವಾಮಿ 2 ಬಾರಿ ಮುಖ್ಯಮಂತ್ರಿ ಆಗಿದ್ದರು. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರೇ ಆಯ್ಕೆಯಾಗಿದ್ದರು. ಆದರೂ ಜಿಲ್ಲೆಯ ನಿರೀಕ್ಷಿತ ಅಭಿವೃದ್ದಿಗೆ ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಧರ್ಮಸಿಂಗ್ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಪಕ್ಷದ ಕಾರ್ಯಾಧ್ಯಕ್ಷ ಚಿದಂಬರ್, ಮಹಿಳೆ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರ ಘಟಕದ ಅಧ್ಯಕ್ಷ ರುದ್ರಪ್ಪ, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಶ್ರೀಧರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬೀ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್ ಇತರರು ಉಪಸ್ಥಿತರಿದ್ದರು.




