Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಷ್ಟ್ರೀಯ ಹೆದ್ದಾರಿ ಕಳಪೆಯಾಗಿದ್ದರೂ ಜೆಡಿಎಸ್ ಶಾಸಕರು ಪ್ರಶ್ನಿಸಿಲ್ಲ : ಚಲುವರಾಯಸ್ವಾಮಿ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಕಳಪೆಯಾಗಿ ನಿರ್ಮಿಸಿದ್ದರೂ ಜೆಡಿಎಸ್ ಶಾಸಕರ‌್ಯಾರೂ ಪಶ್ನೆ ಮಾಡಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಪರ ಪ್ರಚಾರ ನಡೆಸಿ ಮತಯಾಚಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಸಂಪರ್ಕ ರಸ್ತೆಗಳು, ಮೇಲ್ಸೆತುವೆ, ಕೆಳ ಸೇತುವೆಗಳನ್ನು ಸರಿಯಾಗಿ ನಿರ್ಮಿಸದ ಕಾರಣ ಜನರು ಸಂಕಷ್ಟಪಡಬೇಕಾಗಿದೆ. ದಿನನಿತ್ಯ ಅಪಘಾತಗಳು ಸಂಭವಿಸಿ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ.ಇಷ್ಟೆಲ್ಲಾ ಅಧ್ವಾನಗಳಿದ್ದರೂ, ಈ ಬಗ್ಗೆ ಜಿಲ್ಲೆಯ ಶಾಸಕರು ಪ್ರಶ್ನೆ ಮಾಡಲಿಲ್ಲ. ಇವರ ಆಡಳಿತಕ್ಕೆ ಜನರು ಬೇಸತ್ತಿದ್ದು, ಬದಲಾವಣೆಯ ನಿರೀಕ್ಷೆ ಹೊಂದಿದ್ದಾರೆ ಎಂದರು.

ರಾಜ್ಯದ ರೈತರಿಗೆ ಮಾರಕವಾಗಿದ್ದ ಕೃಷಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಬಿಜೆಪಿ ಸರ್ಕಾರ ಮಂಡಿಸಿದಾಗ ಅದಕ್ಕೆ ಜೆಡಿಎಸ್ ಬೆಂಬಲ ನೀಡಿತ್ತು. ಭ್ರಷ್ಟಾಚಾರದಲ್ಲಿ ಈ ಎರಡು ಪಕ್ಷಗಳು ಒಂದೇ ಆಗಿದೆ ಎಂದರು.

ಕಾಂಗ್ರೆಸ್ ಪಕ್ಷ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಗೃಹಿಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ, ವಿದ್ಯುತ್ ಬಿಲ್ ಪಾವತಿಸುವ ನಿರ್ಧಾರ ಮಾಡಿದೆ. ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ನಿರುದ್ಯೋಗಿ ಯುವಕರಿಗೆ ಪ್ರೋತ್ಸಾಹಧನ ನೀಡುವ ಯೋಜನೆ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಬರಬೇಕೆಂದರೆ ಅಭ್ಯರ್ಥಿ ಗಣಿಗ ರವಿಕುಮಾರ್ ಗೆಲ್ಲಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಅಭಿವೃದ್ಧಿ ಆಗಿಲ್ಲ
ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿರುವುದಕ್ಕೆ ಜಿಲ್ಲಾ ಕೇಂದ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಮಂಡ್ಯ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕೆಂದು‌ ಮನವಿ ಮಾಡಿದರು.

ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರದಲ್ಲಿಯೂ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಿದರೂ, ಅವರು ಜಿಲ್ಲೆಯನ್ನು ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಒಂದೆಡೆ ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಸ್ಥಗಿತಗೊಳಿಸಿದರು. ಅತ್ತ ಅಭಿವೃದ್ಧಿ ಯೋಜನೆಗಳನ್ನು ಮಾಡಲಿಲ್ಲ. ಕಡಿಮೆ ಸ್ಥಾನಗಳು ಬಂದರೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ದಳಕ್ಕೆ ಸಂಪೂರ್ಣ ಬೆಂಬಲ ನೀಡಿದ ಜಿಲ್ಲೆಯ ಜನರಿಗೆ ಕೃತಜ್ಞತೆ ಹೇಳುವ ಕೆಲಸವನ್ನು ಎಚ್‌ಡಿಕೆ ಮಾಡಲಿಲ್ಲ ಎಂದು ಟೀಕಿಸಿದರು.

ಇನ್ನು ಚುನಾವಣೆಗೆ ಕೆಲವೇ ದಿನಗಳಷ್ಟೇ ಇದ್ದು, ಎಲ್ಲರೂ ಉತ್ಸಾಹದಿಂದ ಚುನಾವಣೆ ಮಾಡಬೇಕು. ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗಳನ್ನು ಪ್ರತಿ ಮನೆಗೆ ತಲುಪಿಸಬೇಕು. ಜತೆಗೆ ಪ್ರತಿ ಮನೆಗೂ ಹೋಗಿ ಮತ ಕೇಳಬೇಕು. ಇದಲ್ಲದೆ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡಲು 5 ಲಕ್ಷ ರೂ. ಬಡ್ಡಿರಹಿತ ಸಾಲ ನೀಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ. ಪಕ್ಷದಿಂದ ಘೋಷಣೆ ಮಾಡಿರುವ ಎಲ್ಲ ಕಾರ್ಯಕ್ರಮಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿಸಿ ಎಂದರು.

ಅಭ್ಯರ್ಥಿ ರವಿಕುಮಾರ್ ಗಣಿಗ, ಮಾಜಿ ಶಾಸಕರಾದ ಎಂ.ಎಸ್.ಆತ್ಮಾನಂದ, ಎಚ್.ಬಿ.ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ತಾ.ಪಂ. ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಚ್.ಕೃಷ್ಣ, ಎಂ.ಎಸ್.ಚಿದಂಬರ್, ಸಿದ್ಧರೂಢ ಸತೀಶ್‌ಗೌಡ, ಕೆ.ಸಿ.ಪ್ರಶಾಂತ್‌ಬಾಬು, ಸಿದ್ದರಾಮೇಗೌಡ, ಹಾಲಹಳ್ಳಿ ರಾಮಲಿಂಗಯ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ