ಗ್ರಾಹಕರಿಗೆ ಹಾಲಿನ ದರ ಏರಿಕೆ ಮಾಡಿ ಅದರ ಹಣವನ್ನು ಉತ್ಪಾದಕರಿಗೆ ನೀಡುತ್ತಿದ್ದೇವೆ. ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಗೆ ಕೃಷಿ ವಿವಿ ಮಂಜೂರು ಮಾಡಿಸಿದ್ದೇನೆ. ಇದರಿಂದ ಮುಂದೆ ಜಿಲ್ಲೆಯ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಜಿಪಂ, ತಾಪಂ ಚುನಾವಣೆಯ ಪೂರ್ವಭಾವಿ ಕಾಂಗ್ರೆಸ್-ರೈತಸಂಘದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟಿವಿ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ಬರುವುದಕ್ಕಾಗಿ ಬಿಜೆಪಿ-ಜಾ.ದಳದವರು ನಮ್ಮ ಸರ್ಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ನಮಗೆ ಸಂಸ್ಕಾರ ಇದೆ. ನಾವು ಅವರ ರೀತಿ ಮಾತನಾಡಲು ಹೋಗಲ್ಲ ಎಂದರು.

ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನರಿಗೆ ಐದು ಗ್ಯಾರೆಂಟಿ ನೀಡುವುದರ ಜತೆಗೆ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಇತಿಮಿತಿಯೊಳಗೆ ಉತ್ತಮವಾದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿ ಅದರಿಂದ ಬಂದ ಸಾಲವನ್ನು ಮುಂದೆ ಬಂದ ಬಿಜೆಪಿ ಸರ್ಕಾರದ ಮೇಲೆ ಹಾಕಿ ಹೋದರು, ಬಳಿಕ ಬಿಜೆಪಿಯವರು ಮಾಡಿದ ಐದಾರು ಸಾವಿರ ಕೋಟಿ ಸಾಲವನ್ನು ನಮ್ಮ ಕಾಂಗ್ರೆಸ್ ಸರ್ಕಾರ ತೀರಿಸಿ ರಾಜ್ಯದ ಜನರಿಗೆ ಜನಪರವಾದ ಕೆಲಸ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ೫೫ ಲಕ್ಷ ಕೋಟಿ ರೂ.ಸಾಲ ಮಾಡಿದೆ, ಆದರೆ ನಮ್ಮ ಸರ್ಕಾರ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ. ಐದು ಗ್ಯಾರೆಂಟಿ ಯೋಜನೆಯಿಂದ ಮಂಡ್ಯ ಜಿಲ್ಲೆಯ ಜನ ೧೩೦ ಕೋಟಿ ರೂ. ಅನುದಾನ ಪಡೆಯುತ್ತಿದ್ದಾರೆಂದು ತಿಳಿಸಿದರು.
ಮುಂದೆ ಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಕಾಂಗ್ರೆಸ್-ರೈತಸAಘ ಕಾರ್ಯಕರ್ತರಿಗೆ ಒಂದೊಂದು ಜವಾಬ್ದಾರಿ ನೀಡಲಾಗುವುದು. ಚುನಾವಣೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿದು ನಮ್ಮ ಪರವಾಗಿ ಫಲಿತಾಂಶ ಬರುವಂತೆ ಕೆಲಸ ಮಾಡಬೇಕು. ಇಲ್ಲವಾದರೆ ಮುಂದೆ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಸಚಿವ ಎನ್.ಚಲುವರಾಯಸ್ವಾಮಿ ಅವರು ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಮೇಲುಕೋಟೆ ವೈರಮುಡಿಗೆ ೧೦ ಕೋಟಿ ಮಂಜೂರು ಮಾಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡಬೇಕು, ಕಾರ್ಯಕರ್ತರಲ್ಲಿ ಇರುವ ವೈಮನಸ್ಸಿನಿಂದಲೇ ನಮಗೆ ಹಿನ್ನಡೆಯಾಗುತ್ತಿದೆ. ಹಾಗಾಗಿ ಎಲ್ಲರು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉತ್ತಮವಾದ ಆಡಳಿತ ನೀಡುತ್ತಿದ್ದಾರೆ. ಪ್ರತಿಯೊಬ್ಬ ಕಾರ್ಯಕರ್ತರು ಸರಕಾರದ ಯೋಜನೆ, ಜನಪರವಾದ ಕಾರ್ಯಕ್ರಮಗಳನ್ನು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಶಾಸಕರನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಅದೇ ರೀತಿ ಮುಂದಿನ ತಾಪಂ, ಜಿಪಂ ಹಾಗೂ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಅಧಿಕಾರ ಹಿಡಿಯುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ಬಿ.ರೇವಣ್ಣ ಮಾತನಾಡಿ, ಸ್ಥಳೀಯ ಸಂಸ್ಥೆಯ ಚುನಾವಣೆಗಳು ಪಕ್ಷದ ಕಾರ್ಯಕರ್ತರ ಚುನಾವಣೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ನಾವೆಲ್ಲರು ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕ ನಮ್ಮ ನಾಯಕರ ಕೈಬಲಪಡಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸೆಸ್ಕ್ ಅಧ್ಯಕ್ಷರು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ಎಂಎಲ್ಸಿ ದಿನೇಶ್ ಗೂಳಿಗೌಡ, ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಎಚ್.ಬಿ.ರಾಮು, ಚಂದ್ರಶೇಖರ್, ಕ್ಷೇತ್ರದ ಉಸ್ತುವಾರಿ ಕೋತ್ತತಿ ರಾಜಣ್ಣ, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ಕೆಪಿಸಿಸಿ ಸದಸ್ಯ ಬಿ.ರೇವಣ್ಣ, ಕಾಂಗ್ರೆಸ್ ಕಾರ್ಯಧ್ಯಕ್ಷ ಚಿದಾನಂದ, ಅಂಜನಶ್ರೀಕಾಂತ್, ರೈತಸಂಘದ ಅಧ್ಯಕ್ಷ ವಿಜಯಕುಮಾರ್, ಎಚ್.ಕೃಷ್ಣೇಗೌಡ, ದಯಾನಂದ ಮತ್ತಿತರರಿದ್ದರು.




