-
”ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್
- ”ಗೃಹಲಕ್ಷ್ಮಿ” ಯೋಜನೆಯಡಿ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2000 ರೂ.ಮಾಶಾಸನ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2000 ರೂ.ಮಾಶಾಸನ ಹಾಗೂ 10 ಕೆ.ಜಿ.ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದ್ದು,ಈ ಜನಪರ ಯೋಜನೆಯ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯಸ್ವಾಮಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ಜ.27 ರಂದು ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆಯಲಿರುವ ‘ಪ್ರಜಾಧ್ವನಿ’ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 25 ಸಾವಿರ ಸಾಲ ಮನ್ನಾ, 50 ಸಾವಿರ ಸಾಲ ಮನ್ನಾ ಎಂದು ಹೇಳಿಕೊಳ್ಳುವವರಿಗೆ ಕಾಂಗ್ರೆಸ್ ಪಕ್ಷ ಪ್ರತಿ ಕುಟುಂಬಕ್ಕೆ ಈ ಮೂರು ಯೋಜನೆಗಳಿಂದ 5 ವರ್ಷಕ್ಕೆ ಕಾಂಗ್ರೆಸ್ ಪಕ್ಷ 3 ಲಕ್ಷ ರೂ.ಆರ್ಥಿಕ ನೆರವು ನೀಡಲಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.
ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ಅದೇ ರೀತಿ ಜಿಲ್ಲೆಯಲ್ಲೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದರೆ, ಜಿಲ್ಲೆಯ ಅಭಿವೃದ್ಧಿ ಹಾಗೂ ಕಾರ್ಯಕರ್ತರು ಹಾಗೂ ಮುಖಂಡರಿಗೆ ಉತ್ತಮ ರಾಜಕೀಯ ಸ್ಥಾನಮಾನ ದೊರೆಯಲಿದೆ. ಇದನ್ನು ಮನಗಂಡು ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗೆ ಹಾಗೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಸಮಾನ ಎದುರಾಳಿಗಳಾಗಿದ್ದು, ಲಘುವಾಗಿ ಪರಿಗಣಿಸದೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನ ಮಾಡಬೇಕೆಂದು ಮನವಿ ಮಾಡಿದರು.
ಎಐಸಿಸಿ ವೀಕ್ಷಕ ಕುಸುಮ್ ಕುಮಾರ್ ಚೌಧರಿ ಮಾತನಾಡಿ, ರಾಜ್ಯದಲ್ಲಿ ಭಾರತ್ ಐಕ್ಯತಾ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಮಂಡ್ಯದಲ್ಲಿ ಭಾರತ್ ಜೋಡೋ ಕಾರ್ಯಕ್ರಮ ಉತ್ತಮವಾಗಿ ನಡೆದಿದ್ದು, ಬಳ್ಳಾರಿಯಲ್ಲಿ ನಡೆದಿದ್ದ ಸಮಾವೇಶಕ್ಕೆ ಐದು ಲಕ್ಷಕ್ಕಿಂತಲೂ ಹೆಚ್ಚು ಜನರು ಸೇರಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಮಾತ್ರ ನೇರ ಎದುರಾಳಿಯಾಗಿದ್ದು, ಕಾಂಗ್ರೆಸ್ ಗೆಲುವಿಗೆ ಅಡ್ಡಿಪಡಿಸುವುದು ಬಿಜೆಪಿಯ ಉದ್ದೇಶವಾಗಿದೆ ಎಂದರು.
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಳವಾಗಿದ್ದು, ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಪಕ್ಷ ಅಧಿಕಾರಕ್ಕೆ ಬಂದರೆ ವಿವಿಧ ಅವಕಾಶಗಳು ದೊರೆಯಲಿವೆ ಎಂಬುದನ್ನು ಆಕಾಂಕ್ಷಿತರು ಅರ್ಥೈಸಿಕೊಂಡು ಪಕ್ಷ ಬಲವರ್ಧನೆಗೆ ಮುಂದಾಗಬೇಕೆಂದರು. ಮುಂದಿನ ಹದಿನೈದು ದಿನಗಳಲ್ಲಿ ಪಕ್ಷದ ಎಲ್ಲ ಘಟಕಗಳ ಪದಾಧಿಕಾರಿಗಳ ನೇಮಕವನ್ನು ಅಂತ್ಯಗೊಳಿಸಲಾಗುವುದು, ಹಾಗೂ ಬೂತ್ ಮಟ್ಟದ ಕಮಿಟಿ ರಚನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಪ್ರಜಾಧ್ವನಿ ಸಮಾವೇಶ ಯಶಸ್ವಿಗೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಲಾಗುತ್ತಿದೆ. ಪಂಚಾಯಿತಿ ಮಟ್ಟದಲ್ಲಿ ಆಕಾಂಕ್ಷಿತ ಅಭ್ಯರ್ಥಿಗಳು ಸಭೆ ನಡೆಸಿ ಸಮಾವೇಶಕ್ಕೆ ಹೆಚ್ಚು ಜನರನ್ನು ಕರೆತರಲು ಶ್ರಮಿಸಬೇಕೆಂದರು.
ಯುವ ಮುಖಂಡ ಗಣಿಗ ರವಿಕುಮಾರ್ ಮಾತನಾಡಿ, ಜ.27 ರಂದು ನಡೆಯುವ ಸಮಾವೇಶದ ಹಿನ್ನೆಲೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ 257 ಮತ ಕೇಂದ್ರಗಳಿಗೆ ತೆರಳಿ ಸಂಘಟನೆಗೆ ಒತ್ತು ನೀಡಲಾಗುವುದು. ಆ ಮೂಲಕ ಹೆಚ್ಚು ಜನರನ್ನು ಕರೆ ತರಲು ಸಾಮೂಹಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಮುಖಂಡರಾದ ಎಂ.ಎಸ್.ಚಿದಂಬರ್, ಅಮರಾವತಿ ಚಂದ್ರಶೇಖರ್, ಡಾ.ಕೃಷ್ಣ, ಕೀಲಾರ ರಾಧಾಕೃಷ್ಣ, ಉಮ್ಮಡಹಳ್ಳಿ ಶಿವಪ್ಪ, ಸಿದ್ಧರೂಢ ಸತೀಶ್ ಗೌಡ, ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜ್, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಪ್ಪಾಜಿಗೌಡ, ಚೀರನಹಳ್ಳಿ ರಮೇಶ್, ರುದ್ರಪ್ಪ ಹಾಜರಿದ್ದರು.




