ಕೆ.ಆರ್.ಪೇಟೆ ತಾಲ್ಲೂಕಿಗೆ ಜುಲೈ 21 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನ, ಮತ್ತು ಉದ್ಘಾಟನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು ನೆರವೇರಿಸಲಿರುವುದರಿಂದ, ಸದರಿ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ತೋಟಗಾರಿಕೆ, ಕೃಷಿ, ರೇಷ್ಮೆ, ಆರೋಗ್ಯ, ಪಶುಸಂಗೋಪನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಿಂದ ಫಲಾನುಭವಿಗಳಿಗೆ ಸಹಾಯಧನ/ ಸವಲತ್ತುಗಳನ್ನು ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ವಿತರಿಸಲು ಕ್ರಮ ಕೈಗೊಳ್ಳಿ ಎಂದರು.
ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್ ಶಾಲೆ ಉದ್ಘಾಟನೆ, ಆರೋಗ್ಯ ಇಲಾಖೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಯೋಜನೆಗಳು, ಬಿ.ಸಿ.ಎಂ, ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ವಸತಿನಿಲಯ ಶಾಲೆಗಳ ಉದ್ಘಾಟನೆ, ಅಂಗನವಾಡಿ ಕೇಂದ್ರಗಳು ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ಉದ್ಘಾಟನೆ/ಶಂಕುಸ್ಥಾಪನೆಗೆ ಸಿದ್ಧವಿರುವ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸುವಂತೆ ತಿಳಿಸಿದರು.
ತೋಟಗಾರಿಕೆ, ಕೃಷಿ, ರೇಷ್ಮೆ,ಆರೋಗ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆವತಿಂದ ವಸ್ತು ಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಿಗೆ ತಮ್ಮ ಇಲಾಖೆಗಳಿಂದ ದೊರಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.
ಎಲ್ಲಾ ಇಲಾಖೆಗಳ ಫಲಾನುಭವಿಗಳನ್ನು ಲೆಕ್ಕಾಚಾರ ಮಾಡಿದರೆ ಅಂದಾಜು 50000 ಜನರು ಸೇರುವ ನಿರೀಕ್ಷೆ ಇದೆ. ಫಲಾನುಭವಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬಂದು ಹೋಗಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.
ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಜಿ.ಪಂ.ಉಪಕಾರ್ಯದರ್ಶಿ ಕೆ.ಪಿ. ಸಂಜೀವಪ್ಪ, ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು