Sunday, November 22, 2026

ಪ್ರಾಯೋಗಿಕ ಆವೃತ್ತಿ

ಮೇ 1ರ ಕಾರ್ಮಿಕ ದಿನದಂದೇ ಪೌರಕಾರ್ಮಿಕರ ಸೇವೆ ಕಾಯಂ : ಸಿಎಂ ಸಿದ್ದರಾಮಯ್ಯ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವೆಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು. ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದರು.

ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ, ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ. ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು. ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ ಎಂದು ತಿಳಿಸಿದರು.

ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ

ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸಿದ್ದು ನಾವು. ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ. ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ