Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕಬ್ಬು ದರ ನಿಗದಿಗೆ ರೈತರ ಹೋರಾಟ : ನಾಳೆ ರೈತರೊಂದಿಗೆ ಸಿಎಂ ಸಭೆ

ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಪತ್ರಿಕಾಗೋಷ್ಠಿ ಕರೆದು ಶುಕ್ರವಾರ ಕಬ್ಬು ಹೋರಾಟಗಾರರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಎಫ್‌ಆರ್‌ಪಿಯನ್ನು ನಿಗಧಿ ಮಾಡುವುದು ಕೇಂದ್ರ ಸರ್ಕಾರ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಲಿದ್ದೇನೆ” ಎಂದರು.

“ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆ ಬಳಿಕ ಬಾಗಲಕೋಟೆ, ಬೆಳಗಾವಿ ಹಾಗೂ ಹಾವೇರಿ ಭಾಗದ ರೈತ ಮುಖಂಡರೊಂದಿಗೆ ಸಭೆ ಕರೆದಿದ್ದೇನೆ. ಸಭೆಯಲ್ಲಿ ಅವರೆಲ್ಲರ ಸಮಸ್ಯೆ ಆಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳುವೆ. ಅವರು ಸಮಯ ನೀಡಿದರೆ ರೈತರ ಸಮಸ್ಯೆ ಬಗ್ಗೆ ಚರ್ಚಿಸುವೆ” ಎಂದು ತಿಳಿಸಿದರು.

“ರೈತರ ಮುಗ್ದತೆ ಬಳಸಿಕೊಂಡು ವಿರೋಧ ಪಕ್ಷದವರು ಹೋರಾಟವನ್ನು ಹೈಜಾಕ್‌ ಮಾಡುತ್ತಿದ್ದಾರೆ. ವಿರೋಧ ಪಕ್ಷದವರ ಮಾತಿಗೆ ರೈತರು ಬೆಲೆ ಕೊಡಬೇಡಿ. ರೈತರ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕ್ಕರೆ ಸಚಿವ ಶಿವಾನಂದ ಪಾಟೀಲ್‌ ಎಲ್ಲ ಕೆಲಸ ಮಾಡಿದ್ದಾರೆ” ಎಂದು ಹೇಳಿದರು.

“FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿ.ಜೆ.ಪಿ. ಯವರ ಮರಳು ಮಾತುಗಳಿಗೆ ಬಲಿಯಾಗಬಾರದು. ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ ಪ್ರತಿಭಟನಾ ಸಭೆಗೆ ಹೋಗಿಲ್ಲ” ಎಂದು ಪ್ರಶ್ನಿಸಿದರು.

“ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು. ಅದರಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ” ಎಂದರು.

ಅತ್ತ ಮತ್ತಷ್ಟು ಅಕ್ರೋಶಗೊಂಡ ಪ್ರತಿಭಟನಕಾರರು, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ಅಣಕು ಶವಯಾತ್ರೆ ನಡೆಸಿದರು. ‘ಸತ್ತುಹೋದ ಸಕ್ಕರೆ ಸಚಿವ’ ಎಂಬ ಬ್ಯಾನರ್ ಹಾಕಿ, ಬಾಯಿ ಬಾಯಿ ಬಡಿದುಕೊಂಡು ಅತ್ತರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ