Friday, September 20, 2024

ಪ್ರಾಯೋಗಿಕ ಆವೃತ್ತಿ

ನೈತಿಕ ಪೊಲೀಸ್ ಗಿರಿಗೆ ಬ್ರೇಕ್ : ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

”4 ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಅಂತಾ ಗೊತ್ತಿದೆ. ಇನ್ನೂ ಮುಂದೆ ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯದಂತೆ ಎಚ್ಚರಿಕೆ ವಹಿಸಿ, ಅಂತಹ ಘಟನೆಗಳು ನಡೆದರೆ ಆಯಾ ವಿಭಾಗದ ಡಿಸಿಪಿ ಮತ್ತು ಎಸ್ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಕಾನೂನು ಬಾಹಿರ ಕ್ಲಬ್ ನಡೆಸಲು ಅವಕಾಶ ನೀಡಬಾರದು. ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್​​ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.

ತೇಜೋವಧೆ ಮಾಡಿದರೆ ಕೇಸ್ ದಾಖಲಿಸಿ

ಅಕ್ರಮ ನೈಟ್ ಕ್ಲಬ್​​ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್​​, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದರೆ ಸುಮೋಟೋ ಕೇಸ್ ದಾಖಲಿಸಿ ಕ್ರಮ ಪ್ರಕರಣ ಹಾಕಿರುವ ಬಗ್ಗೆ ಹಾಗೂ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸದೇ ಇರುವ ವಿಚಾರವೂ ಸಭೆಯಲ್ಲಿ ಚರ್ಚೆ‌ ನಡೆಯಿತು.

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು. ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ​​ ಪ್ರತಾಪ್ ರೆಡ್ಡಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್​​, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್​ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!