Thursday, September 19, 2024

ಪ್ರಾಯೋಗಿಕ ಆವೃತ್ತಿ

ಯತ್ನಾಳ್ ‘ಹಿಟ್ ಆ್ಯಂಡ್ ರನ್’ ಮಾಡದೆ ದಾಖಲೆ ಒದಗಿಸಲಿ: ಸಿಎಂ ಸಿದ್ದರಾಮಯ್ಯ

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣದ ದಾಖಲೆಗಳನ್ನು ತನಿಖಾ ಆಯೋಗದ ಮುಂದಿಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ 40 ಸಾವಿರ ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಬಿಜೆಪಿ ಶಾಸಕ ಯತ್ನಾಳ್ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದೇ ವಿಚಾರವನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ, ಶಾಸಕರಾದ ಬನಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಆ್ಯಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು ಎಂದಿದ್ದಾರೆ.

“>

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ಹೇಳಿದ್ದಾರೆ.

ತನ್ನನ್ನು ದೇಶದ “ಚೌಕಿದಾರ” ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು “ನ ಖಾವೂಂಗಾ ನಾ ಖಾನೆ ದೂಂಗಾ” ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು

ಕನ್ನಡಪರ ಸಂಘಟೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!