Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ಅನುಕೂಲ; 20 ಸ್ಥಾನ ಗೆಲ್ಲುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ನುಡಿದಂತೆ ನಡೆದಿರುವ ಕಾಂಗ್ರೆಸ್‌, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಲೂ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿಗರಂತೆ ಎಲ್ಲ 28 ಕ್ಷೇತ್ರಗಳನ್ನೂ ಗೆಲ್ತೀವಿ ಅಂತ ಸುಳ್ಳು ಹೇಳಲ್ಲ” ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, “ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36,000 ಕೋಟಿ ರೂ. ಹಾಗೂ ಮುಂದಿನ ವರ್ಷ 52,009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದೆ. ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ” ಎಂದಿದ್ದಾರೆ.

“2018ರಲ್ಲಿ ಬಿಜೆಪಿಗರು ನೀಡಿದ 600 ಭರವಸೆಗಳಲ್ಲಿ ಶೇ.10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ 15 ಲಕ್ಷ ರೂ. ಹಾಕಲಿಲ್ಲ. 20 ಕೋಟಿ ಉದ್ಯೋಗವನ್ನೂ ಸೃಷ್ಟಿಸಲಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!