Wednesday, September 18, 2024

ಪ್ರಾಯೋಗಿಕ ಆವೃತ್ತಿ

ಒಕ್ಕಲಿಗರ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ| ಮುನಿರತ್ನ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ

ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯ ಹಾಗೂ ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರನ್ನು ಒಳಗೊಂಡ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಕಾಂಗ್ರೆಸ್ಸಿನ ಒಕ್ಕಲಿಗ ನಾಯಕರ ನಿಯೋಗ ಮುನಿರತ್ನ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು. ನಿಯೋಗದಲ್ಲಿ ಸಚಿವರಾದ ಚಲುವರಾಯಸಾಮಿ, ಡಾ. ಎಂ ಸಿ ಸುಧಾಕರ್, ಶಾಸಕ ಹೆಚ್ ಸಿ ಬಾಲಕೃಷ್ಣ ಪುಟ್ಟಣ್ಣ ಶರತ್ ಬಚ್ಚೇಗೌಡ ಸೇರಿದಂತೆ ಇತರ ನಾಯಕರು ಇದ್ದಾರೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಆರೋಪ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕೇಳಿಬಂದಿದೆ.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಶನಿವಾರ ದೂರು ದಾಖಲಿಸಿದ್ದರು.

ಪೊಲೀಸರಿಂದ ಯಾವುದೇ ಕ್ರಮವಾಗದಿದ್ದಾಗ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಎಫ್‌ಐಆರ್ ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಗಮನಕ್ಕೆ ತಂದರು.

ಮುನಿರತ್ನ ಚಲನವಲನ ಬಗ್ಗೆ ನಿಗಾ ಇರಿಸಿದ್ದ ಬೆಂಗಳೂರಿನ ಪೊಲೀಸರು, ಮುನಿರತ್ನ ಅವರ ಮೊಬೈಲ್ ಲೊಕೇಶನ್ ಟ್ಯಾಕ್ ಮಾಡಿ, ಆಂಧ್ರಕ್ಕೆ ತೆರಳುತ್ತಿದ್ದ ಮುನಿರತ್ನ ಅವನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ. ಈಗ ಪೊಲೀಸರ ವಶದಲ್ಲಿ ಶಾಸಕ ಮುನಿರತ್ನ ಇದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!